ರಾಜ್ಯದಲ್ಲಿ ಮೊದಲ ಬಾರಿಗೆ ಚುನಾವಣಾ ಅಕ್ರಮ ತಡೆಗೆ ಸಿ-ವಿಜಿಲ್ ಆ್ಯಪ್ ಬಳಕೆ!

 ಹೊಸದಿಗಂತ ವರದಿ,ಮಡಿಕೇರಿ:

ಚುನಾವಣೆಯಲ್ಲಿ ನಡೆಯಬಹುದಾದ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಚುನಾವಣಾ ಆಯೋಗವು ಸಿ.ವಿಜಿಲ್ (C.Vigil) ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿಪಡಿಸಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನಗೊಳಿಸುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಬಿ. ಸಿ.ಸತೀಶ ಅವರು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಪ್ಲಿಕೇಷನ್‍ನ್ನು ಗೂಗಲ್ ಪ್ಲೇ ಸ್ಟೋರ್’ನಿಂದ ಡೌನ್‍ಲೋಡ್ ಮಾಡಿಕೊಂಡು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಗ್ರಿಗಳನ್ನು, ಮದ್ಯವನ್ನು ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ವಿಡಿಯೋ ಮತ್ತು ಪೋಟೊಗಳ ಮೂಲಕ ದೂರು ಸಲ್ಲಿಸಬಹುದಾಗಿದೆ ಎಂದು ವಿವರಿಸಿದರು.

ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸಾರ್ವಜನಿಕ/ ಖಾಸಗಿ ಸ್ಥಳಗಳಲ್ಲಿ ಅಳವಡಿಸಲಾಗಿರುವ ಹೆದ್ದಾರಿ ಫಲಕಗಳ ಪ್ರಚಾರದ ಮಾಹಿತಿಯನ್ನು ತೆರವುಗೊಳಿಸಲು ಕ್ರಮವಹಿಸಲಾಗಿದೆ ಎಂದರು.

‘ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟ/ ಪ್ರಸಾರ ಸಂಬಂಧ ಪೂರ್ವಾನುಮತಿ ಪಡೆಯಬೇಕಿದ್ದು, ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಭವನದ ಮೂರನೇ ಮಹಡಿಯಲ್ಲಿ ‘ಎಂಸಿಎಂಸಿ’ ಕಚೇರಿ ಆರಂಭಿಸಲಾಗಿದ್ದು, ಪೂರ್ವಾನುಮತಿ ಪಡೆಯಬೇಕಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮತದಾರರ ಸಹಾಯವಾಣಿ: ಚುನಾವಣೆಯ ಅಕ್ರಮಗಳ ಬಗ್ಗೆ, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗಿರುವ ಬಗ್ಗೆ, ಮತಗಟ್ಟೆ ಬಗ್ಗೆ ಮಾಹಿತಿ ಪಡೆಯಲು ಹಾಗೂ ಇತರೆ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು/ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಟೋಲ್ ಫ್ರೀ ಸಂಖ್ಯೆ 1950 ಕರೆ ಮಾಡಬಹುದಾಗಿದೆ. ವೋಟರ್ ಸಹಾಯವಾಣಿಯು 24*7 ಕಾರ್ಯನಿರ್ವಹಿಸುವುದು. (ಹೊರ ಜಿಲ್ಲೆಯಿಂದ ಕರೆ ಮಾಡುವವರು 08272-1950ಗೆ ಕರೆ ಮಾಡುವುದು) ಎಂದರು.

ಚುನಾವಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ www.eci.nic.in ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್‍ಸೈಟ್ www.ceokarnataka.kar.nic.in ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್‍ಸೈಟ್: www.kodagu.nic.in ನಲ್ಲಿ ಮಾಹಿತಿಯನ್ನು ಪಡೆಯಬಹುದು ಎಂದು ವಿವರಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮಾತನಾಡಿ ಕುಟ್ಟ, ಮಾಕುಟ್ಟ ಕರಿಕೆ ಸೇರಿ 3 ಅಂತರ ರಾಜ್ಯ ಚೆಕ್‌ಪೋಸ್ಟ್’ಗಳನ್ನು ತೆರೆಯಲಾಗಿದೆ. ಹಾಗೆಯೇ 11 ಅಂತರ್ ಜಿಲ್ಲಾ ಚೆಕ್ಪೋಸ್ಟ್’ಗಳನ್ನೂ ತೆರೆಯಲಾಗಿದೆ ಎಂದು ತಿಳಿಸಿದರು.
ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ನಿಯೋಜಿಸಲಾಗುತ್ತದೆ. ಶಾಂತಿಯುತ ಚುನಾವಣೆಗೆ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕ್ರಮವಹಿಸಲಾಗಿದೆ ಎಂದರು.

ಸ್ವೀಪ್ ಹಾಗೂ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ.ಎಸ್.ಆಕಾಶ್ ಅವರು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಶಿಕ್ಷಣ ಮತ್ತು ಜಾಗೃತಿ ಸಮಿತಿ ವತಿಯಿಂದ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಡಿಮೆ ಮತದಾನವಾಗಿದ್ದ 65 ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗಿದೆ. ವೋಟರ್ ಹೆಲ್ಪ್’ಲೈನ್ ಆ್ಯಪ್ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ಅಬಕಾರಿ ಇಲಾಖೆಯ ಜಿಲ್ಲಾ ಆಯುಕ್ತ ಜಗದೀಶ್ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!