ಹೊಸದಿಗಂತ ಬೀದರ್:
ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಅನಿರೀಕ್ಷಿತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆಯು ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ಭಾಲ್ಕಿ ತಾಲೂಕಿನ ಬೋಳೆಗಾವ ಗ್ರಾಮದ ನಿವಾಸಿ ಅಂಕುಶ್ ಸುಧಾಮ್ (57) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಭಾಲ್ಕಿ ಅರಣ್ಯ ಇಲಾಖೆಯಲ್ಲಿ ‘ವಾಚರ್’ ಆಗಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ (ಫೆ. 6) ಬೆಳಿಗ್ಗೆ ಇಲಾಖೆಯ ಕಚೇರಿ ಪಕ್ಕದಲ್ಲಿರುವ ವಸತಿ ಗೃಹದಲ್ಲೇ ಅಂಕುಶ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಡಿಸಿಎಫ್ ಆಶಿಶ್ ರೆಡ್ಡಿ ಅವರು ಘಟನಾ ಸ್ಥಳಕ್ಕೆ ಧಾವಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, “ಸಮಸ್ಯೆಗಳಿಗೆ ಆತ್ಮಹತ್ಯೆ ಎಂದಿಗೂ ಪರಿಹಾರವಲ್ಲ. ಇಲಾಖೆಯ ಸಿಬ್ಬಂದಿಯನ್ನು ಕಳೆದುಕೊಂಡಿರುವುದು ನೋವಿನ ಸಂಗತಿ. ಮೃತರ ಕುಟುಂಬಕ್ಕೆ ಸರ್ಕಾರ ಹಾಗೂ ವೈಯಕ್ತಿಕವಾಗಿ ಎಲ್ಲಾ ರೀತಿಯ ನೆರವು ನೀಡಲಾಗುವುದು,” ಎಂದು ಭರವಸೆ ನೀಡಿದರು.
ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರು ಸಚಿವ ಈಶ್ವರ ಖಂಡ್ರೆ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
“ಅರಣ್ಯ ಸಚಿವರ ಕಿರುಕುಳ ತಾಳಲಾರದೆ ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರಕರಣವನ್ನು ಮುಚ್ಚಿಹಾಕಲು ಇಲಾಖೆಯ ಅಧಿಕಾರಿಗಳು ಮೃತನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಕೂಡಲೇ ಸಚಿವ ಖಂಡ್ರೆ ಅವರಿಂದ ರಾಜೀನಾಮೆ ಪಡೆಯಬೇಕು,” ಎಂದು ಆಗ್ರಹಿಸಿದ್ದಾರೆ.
ಸಚಿವರ ಕಾಟದಿಂದಲೇ ಈ ಸಾವು ಸಂಭವಿಸಿದೆ ಎಂದು ನೇರವಾಗಿ ಆರೋಪಿಸಿರುವ ಖೂಬಾ, ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಒಟ್ಟಾರೆಯಾಗಿ, ಸಿಬ್ಬಂದಿಯೊಬ್ಬರ ಸಾವು ಈಗ ಜಿಲ್ಲೆಯಲ್ಲಿ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.



