ಬ್ರ್ಯಾಂಡ್​ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚಿಸಿ, ಆರು ತಿಂಗಳಲ್ಲಿ ನೀಲನಕ್ಷೆ : ಡಿಎಸಿಂ ಡಿಕೆ ಶಿವಕುಮಾರ್​

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿಗೆ ಹೊಸ ರೂಪ ನೀಡಿ, ಬ್ರ್ಯಾಂಡ್ ಬೆಂಗಳೂರು ನಿರ್ಮಾಣಕ್ಕೆ ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜೊತೆ ಶನಿವಾರ ಮೊದಲ ಸಭೆ ನಡೆದಿದ್ದು , ಮೊದಲು ಎಲ್ಲಾ ಪಕ್ಷಗಳ ಶಾಸಕರ ಅಭಿಪ್ರಾಯ ಪಡೆದಿದ್ದೆ. ಈಗ ಕೈಗಾರಿಕೆ, ಬಂಡವಾಳ ಹೂಡಿಕೆದಾರರ ಅಭಿಪ್ರಾಯ ಪಡೆದಿದ್ದು, ಮುಂದೆ ಮತ್ತೊಂದು ಹಂತದ ಸಭೆ ಮಾಡುತ್ತೇನೆ. ಮುಂದಿನ ವಾರ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು. ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಸೇರಿ ಒಂದು ಸಮಿತಿ ರಚಿಸಿ, ಬೆಂಗಳೂರಿನ ಅಭಿವೃದ್ಧಿಗೆ ಆರು ತಿಂಗಳಲ್ಲಿ ನೀಲನಕ್ಷೆ, ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.

‘ಬ್ರ್ಯಾಂಡ್​ ಬೆಂಗಳೂರು’ ಹೆಸರಿನಡಿ ಶನಿವಾರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಭೆಗೆ ಬಂದವರು ತಮ್ಮ ಸ್ವಾರ್ಥ ಬಿಟ್ಟು, ಸಮಾಜಕ್ಕೆ ತಮ್ಮ ಕೊಡುಗೆ ನೀಡಲು ಸರ್ಕಾರದ ಜತೆ ಕೈ ಜೋಡಿಸಿ ಸಲಹೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೈ ಡೆನ್ಸಿಟಿ ಕಾರಿಡಾರ್, ಕಸ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ಉತ್ತಮ ಗುಣಮಟ್ಟದ ಶಿಕ್ಷಣ, ಕೊಳಗೇರಿ ಪ್ರದೇಶ ಅಭಿವೃದ್ಧಿ, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ, ಕೆಲವು ಪ್ರದೇಶ 24/7 ತೆರೆಯಲು, ವಾಹನ ನಿಲುಗಡೆ, ಭ್ರಷ್ಟಾಚಾರ ನಿಯಂತ್ರಣ ಸೇರಿದಂತೆ ಅನೇಕ ಸಲಹೆ ನೀಡಿದ್ದಾರೆ ಎಂದು ಹೇಳಿದರು.

ನಮ್ಮ ಆರ್ಥಿಕತೆ ಗಮನದಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಬೆಂಗಳೂರಿನ ಸ್ವಾಭಿಮಾನ, ಗೌರವ ಉಳಿಸಲು ಸಲಹೆ ಕೇಳಿದ್ದೇನೆ. ನಾನು ಕೆಲವು ಸಲಹೆ ಒಪ್ಪುತ್ತೇನೆ. ಎಲ್ಲರೂ ನಮಗೆ ಸಲಹೆ ನೀಡಿದ್ದು, ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.

ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್, ಮಾಜಿ ಸಿಎಂ ಡಿ ವಿ ಸದಾನಂದ ಗೌಡ, ಉದ್ಯಮಿಗಳಾದ ಆರ್ ಕೆ ಮಿಶ್ರಾ, ಇರಫಾನ್, ಕಿರಣ್ ಮುಜುಂದಾರ್ ಷಾ, ಪ್ರಶಾಂತ್, ಗೀತಾಂಜಲಿ ಕಿರ್ಲೊಸ್ಕರ್, ಡಾ ಮಧುಕರ್ ಕಾಮತ್, ಎಂ ಆರ್ ಜೈಶಂಕರ್, ರಾಜಾ ಬಾಗ್ಮನೆ, ಉಲ್ಲಾಸ್ ಕಾಮತ್, ಅರುಣ್ ಚಿಟ್ಟಿಲಾಪಿಲ್ಲಿ, ಕ್ರಿಕೆಟಿಗ ಬ್ರಿಜೇಶ್ ಪಟೇಲ್, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ ಎಸ್ ಪಾಟೀಲ್, ಸಿದ್ದಯ್ಯ, ರವಿಚಂದ್ರ ಮತ್ತಿತರರು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!