ಹಾಲಿನ ದರ ಏರಿಕೆ: ಸರಣಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್​ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರ್ಕಾರವು ಹಾಲಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಸರಣಿ ಟ್ವೀಟ್‌ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು , ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ.

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು. ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದು ಹೇಳಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!