BREAKING | ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನ

ಹೊಸದಿಗಂತ ವರದಿ ಬೆಂಗಳೂರು:

ಇಸ್ರೊ ಮಾಜಿ ಅಧ್ಯಕ್ಷ ಮತ್ತು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ. ಕಸ್ತೂರಿ ರಂಗನ್ ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಏ. 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (ಆರ್‌ಆರ್‌ಐ) ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಬಾಹ್ಯಾಕಾಶ ವಿಜ್ಞಾನಿಯಾಗಿದ್ದು, ಇವರು 2003ರ ರವರೆಗೆ 9 ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ನೇತೃತ್ವ ವಹಿಸಿದ್ದರು. 1976ರಿಂದ 1983ರವರೆಗೆ ಭಾಸ್ಕರ -1 ಮತ್ತು 2 ಉಪಗ್ರಹದ ಯೋಜನಾ ನಿರ್ದೇಶಕರಾಗಿದ್ದರು. ಬಳಿಕ ಇಸ್ರೋದಲ್ಲಿ ವಿವಿಧ ಹುದ್ದೆ- ಜವಾಬ್ದಾರಿಗಳನ್ನು ನಿಭಾಯಿಸಿದ್ದರು. 2004ರಿಂದ 2009ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡೀಸ್‌ನ ನಿರ್ದೇಶಕರಾಗಿದ್ದರು.

ಅವರು 2003–09ರವರೆಗೆ ರಾಜ್ಯಸಭೆಯ ಸದಸ್ಯರಾಗಿ ಯೋಜನಾ ಆಯೋಗದ ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದು ಕರೆಯಲ್ಪಡುವ ಕಸ್ತೂರಿರಂಗನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಪಶ್ಚಿಮ ಘಟ್ಟಗಳ ರಾಜ್ಯಗಳಲ್ಲಿ ಬಹುಚರ್ಚೆಯಲ್ಲಿರುವ ಡಾ. ಕಸ್ತೂರಿ ರಂಗನ್ ವರದಿಯ ಆಯೋಗದ ನೇತೃತ್ವ ವಹಿಸಿದ್ದರು. ಇವರು ಭಾರತ ಸರ್ಕಾರದಿಂದ ಮೂರು ನಾಗರಿಕ ಪ್ರಶಸ್ತಿಯ ಸ್ವೀಕೃತರಾಗಿದ್ದಾರೆ. 1982ರಲ್ಲಿ ಪದ್ಮಶ್ರೀ, 1992ರಲ್ಲಿ ಪದ್ಮಭೂಷಣ ಮತ್ತು 2000ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.


- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!