ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ನಿಧನ: ಪ್ರಧಾನಿ ಸೇರಿದಂತೆ ಗಣ್ಯರ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರದ ಮಾಜಿ ಸಚಿವ, ಜೆಡಿಯು ಅಧ್ಯಕ್ಷ ಶರದ್ ಯಾದವ್ (75) ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ಛತ್ತರ್‌ಪುರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅದಾಗಲೇ ಮೃತಪಟ್ಟಿದ್ದಾರೆ ಎಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ. ದೀರ್ಘಕಾಲದವರೆಗೆ ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ  ಅವರು ನಿಯಮಿತವಾಗಿ ಡಯಾಲಿಸಿಸ್‌ಗೆ ಒಳಗಾಗಿದ್ದರು. ಶರದ್ ಯಾದವ್ ಅವರ ಪಾರ್ಥಿವ ಶರೀರವನ್ನು ಅಭಿಮಾನಿಗಳು ಮತ್ತು ಸಂಬಂಧಿಕರ ಭೇಟಿಗಾಗಿ ದಿನವಿಡೀ ನವದೆಹಲಿಯ ಛತ್ತರ್‌ಪುರದಲ್ಲಿರುವ ಅವರ 5A ಪಶ್ಚಿಮ ನಿವಾಸದಲ್ಲಿ ಇರಿಸಲಾಗುತ್ತದೆ.

ಶರದ್ ಯಾದವ್ ನಿಧನದ ಸುದ್ದಿಯನ್ನು ಅವರ ಪುತ್ರಿ ಸುಭಾಷಿಣಿ ಸ್ಪಷ್ಟಪಡಿಸಿದರು. ಟ್ವಿಟ್ಟರ್‌ನಲ್ಲಿ ತಂದೆ ಇನ್ನಿಲ್ಲ ಎಂದು ಟ್ವೀಟ್‌ ಮಾಡಿದ್ದು, ಗುರುವಾರ ರಾತ್ರಿ 10.19ಕ್ಕೆ ಕೊನೆಯುಸಿರೆಳೆದರು ಎಂದು ಹೇಳಿದರು. ಶರದ್ ಯಾದವ್ ಅವರಿಗೆ ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿ ಇದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತೆಲಂಗಾಣ ಸಿಎಂ ಕೆಸಿಆರ್, ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಬಿಹಾರ ಸಂತಾಪ ಸೂಚಿಸಿದ್ದಾರೆ. ಸಿಎಂ ನಿತೀಶ್ ಕುಮಾರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್, ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಮತ್ತಿತರರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಮೋದಿಯವರು ಟ್ವೀಟ್‌ ಮಾಡಿದ್ದು, ʻಶ್ರೀ ಶರದ್ ಯಾದವ್ ಅವರ ನಿಧನದಿಂದ ನೋವಾಗಿದೆ. ತಮ್ಮ ಸುದೀರ್ಘ ಸಾರ್ವಜನಿಕ ಜೀವನದಲ್ಲಿ ಅವರು ಸಂಸದ ಮತ್ತು ಸಚಿವರಾಗಿ ತಮ್ಮನ್ನು ಗುರುತಿಸಿಕೊಂಡರು. ಡಾ. ಲೋಹಿಯಾ ಅವರ ಆದರ್ಶಗಳಿಂದ ಬಹಳ ಪ್ರೇರಿತರಾಗಿದ್ದರು. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ.

ಶರದ್ ಯಾದವ್ ಅವರು 1947 ರಲ್ಲಿ ಮಧ್ಯಪ್ರದೇಶದ ಹೋಶಂಗಾಬಾದ್‌ನ ಹಳ್ಳಿಯಲ್ಲಿ ಜನಿಸಿದರು. 1971ರಲ್ಲಿ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿ ಡಾ. ರಾಮ್ ಮನೋಹರ್ ಲೋಹಿಯಾ ಅವರ ವಿಚಾರಗಳಿಂದ ಪ್ರೇರಿತರಾಗಿ ಸಕ್ರಿಯ ಯುವ ನಾಯಕರಾಗಿ ಅನೇಕ ಚಳುವಳಿಗಳಲ್ಲಿ ಭಾಗವಹಿಸಿದರು. 1974ರಲ್ಲಿ ಸಕ್ರಿಯ ರಾಜಕಾರಣ ಪ್ರವೇಶಿಸಿದರು.

ಮೊದಲ ಬಾರಿಗೆ ಮಧ್ಯಪ್ರದೇಶ ಜಬಲ್ಪುರ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಏಳು ಬಾರಿ ಲೋಕಸಭೆಗೆ ಮತ್ತು ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. 1999 ರಿಂದ 2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದರು. ಅವರ ಅಂತ್ಯಕ್ರಿಯೆ ಮಧ್ಯಪ್ರದೇಶದ ಹೋಶಂಗಾಬಾದ್‌ನಲ್ಲಿ ಶನಿವಾರ ನಡೆಯುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!