ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ.
ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.