ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ (87) ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಸಾರ್ವಜನಿಕರ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ (ನ.8) ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿದ್ದ ಚಂದ್ರೇಗೌಡ ಅವರು ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಕಾನೂನು ಸಚಿವರಾಗಿದ್ದರು. ಕಾಂಗ್ರೆಸ್ ಕಟ್ಟಾಳಾಗಿದ್ದ ಚಂದ್ರೇಗೌಡ ಅವರು ಬದಲಾದ ಸನ್ನಿವೇಶದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಳಿಕ ಬಿಜೆಪಿಯಿಂದ ಸಂಸದರಾಗಿಯೂ ಆಯ್ಕೆಯಾಗಿದ್ದರು.