October 9, 2026
Friday, October 9, 2026
spot_img

ಬೆಳಗಾವಿ ಭೀಕರ ಅಗ್ನಿ ದುರಂತದಲ್ಲಿ ನಾಲ್ವರು ಸಾ*ವು: ಸ್ಥಳಕ್ಕೆ ಭೇಟಿ ಕೊಟ್ಟ ಸತೀಶ್‌ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ನಗರದ ಚವ್ಹಾಟ್ ಗಲ್ಲಿ ಪಕ್ಕದ ಡೋರ್ ಗಲ್ಲಿಯಲ್ಲಿ ಸೋಮವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಬ್ಬದ ದಿನವೇ ಸಂಭವಿಸಿದ ಈ ದುರಂತ ಬೆಳಗಾವಿ ಜನತೆಯನ್ನು ತೀವ್ರ ಶೋಕಸಾಗರದಲ್ಲಿ ತಳ್ಳಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಆಸೀಫ್ ಸೇಠ್, ಮಾಜಿ ಶಾಸಕ ಅನಿಲ್ ಬೆನಕೆ, ಬಿಜೆಪಿ ಮುಖಂಡ ಡಾ. ರವಿ ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಗ್ನಿ ಅವಘಡ ಮತ್ತು ತನಿಖೆ:

ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಮಾಹಿತಿ ನೀಡಿ, “ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ನಾಲ್ವರು ಮಹಿಳೆಯರು ಅಸುನೀಗಿದ್ದು, ಗಾಯಗೊಂಡ ಗಜಾನನ (ಶೇ. 90ರಷ್ಟು ಸುಟ್ಟ ಗಾಯ) ಹಾಗೂ ಅವರ ಪುತ್ರ ರೋಷನ್ (ಶೇ. 40ರಷ್ಟು ಸುಟ್ಟ ಗಾಯ) ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಜಾನನ ಅವರ ಸ್ಥಿತಿ ಗಂಭೀರವಾಗಿದೆ,” ಎಂದು ತಿಳಿಸಿದರು. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಅಥವಾ ಫ್ರಿಡ್ಜ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಎಫ್ಎಸ್ಎಲ್ ಹಾಗೂ ಹೆಸ್ಕಾಂ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

ಪರಿಹಾರಕ್ಕೆ ಆಗ್ರಹ:

ದುರಂತದಲ್ಲಿ ಬಡ ಕುಟುಂಬ ನಲುಗಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ಗಾಯಗೊಂಡವರಿಗೆ ಅತ್ಯುತ್ತಮ ಚಿಕಿತ್ಸಾ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಶಾಸಕ ಅನಿಲ್ ಬೆನಕೆ ಒತ್ತಾಯಿಸಿದರು. ಗಣ್ಯರು ಮೃತರ ಬಂಧುಗಳಿಗೆ ಸಾಂತ್ವನ ಹೇಳಿದರು.

Must Read