ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ.

ಮೃತರನ್ನು ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಗ್ರಾಮದವರಾದ ಈ ಏಳು ಮಂದಿ ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಇಂದು (ಆ.13) ನಸುಕಿನ ಜಾವ 3:30ಕ್ಕೆ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು ಮೂವರಿಗೆ ಗಾಯಗಳಾಗಿವೆ.

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!