SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು BMTC ಬಸ್ ನಲ್ಲಿ ಪ್ರಯಾಣ ಉಚಿತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಂದು ಬಿಎಂಟಿಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸೋದಕ್ಕೆ ಅವಕಾಶ ನೀಡಲಾಗಿದೆ.

ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ,ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ ಎಂದಿದೆ.

2024-25ನೇ ಸಾಲಿನ ಪಿ.ಯು.ಸಿ ಪರೀಕ್ಷೆ-1 ದಿನಾಂಕ 01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ-1 ದಿನಾಂಕ 21.03.2025 ರಿಂದ 04.04.2025 ರವರೆಗೆ ನಡೆಯಲಿದ್ದು, ಪರೀಕ್ಷೆಯು ಬೇರೆ ಬೇರೆ ಪರೀಕ್ಷಾ ಕೇಂದ್ರಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡಂತೆ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ ಎಂದು ತಿಳಿಸಿದೆ.

ಪಿ.ಯು.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 01.03.2025 ರಿಂದ 20.03.2025 ರವರೆಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ವಿದ್ಯಾರ್ಥಿಗಳಿಗೆ ದಿನಾಂಕ 21.03.2025 ರಿಂದ 04.04.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು,ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!