ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಶಾಲೆಗಳ ರೀತಿಯಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ಗ್ರಂಥಾಲಯಗಳಿಗೂ ಉಚಿತವಾಗಿ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.
ಗ್ರಂಥಾಲಯ ಇಲಾಖೆಗೆ ಹೊಸ ಸ್ಪರ್ಶ ನೀಡಲು ನಿರ್ಧರಿಸಲಾಗಿದೆ. ಆ ನಿಟ್ಟಿನಲ್ಲಿ ಮೊದಲ ಬಾರಿಗೆ ಐಎಎಸ್ ದರ್ಜೆಯ ಅಧಿಕಾರಿಯನ್ನು ಇಲಾಖೆಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಓದುಗರಿಂದ ಬಂದ ದೂರುಗಳನ್ನು ಅವಲೋಕಿಸಿದಾಗ ಅಲ್ಲಿ ಪುಸ್ತಕಗಳೇ ಇಲ್ಲದಿರುವುದು, ಇರುವ ತಂತ್ರಾಂಶ ಕೂಡ ಓದುಗ ಸ್ನೇಹಿಯಾಗಿಲ್ಲ ಎಂಬುದು ಸೇರಿ ಹಲವು ಲೋಪಗಳಿರುವುದು ಕಂಡುಬಂದಿದೆ. ಈ ಸಂಬಂಧ ಇಲಾಖೆಯ ಕೆಲವು ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದರು.
ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯ ತಂತ್ರಾಂಶ ಬದಲಾವಣೆ, ಮೂಲ ಸೌಕರ್ಯ ಕಲ್ಪಿಸುವುದು, ಕಾಯಂ ಹಾಗೂ ಗುತ್ತಿಗೆ ಸಿಬ್ಬಂದಿ ನೇಮಕ ಸೇರಿದಂತೆ ಅಗತ್ಯ ಕ್ರಮಕ್ಕೆ ಮುಂದಾಗಿದ್ದೇವೆ. ಬಜೆಟ್ ಅಧಿವೇಶನಕ್ಕೆ ಮೊದಲೇ ಈ ಕುರಿತು ನಿರ್ದಿಷ್ಟ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದರು.