ಎಲ್ಲಾ ಸರ್ಕಾರಿ ಶಾಲೆ , ಕಾಲೇಜುಗಳಿಗೆ ಉಚಿತ ವಿದ್ಯುತ್ , ನೀರು: ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎಲ್ಲಾ ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ಉಚಿತ ನೀರಿನ ವ್ಯವಸ್ಥೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿಕ್ಷಣಕ್ಕೆ ಶಾಲೆಗಳು ಪ್ರಥಮ ವೇದಿಕೆ. ರಾಜ್ಯದ ಬಡ, ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ‘ಗೃಹ ಜ್ಯೋತಿ’ ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೂ ಸಹ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯ ಒದಗಿಸುವುದರಿಂದ, ಸರ್ಕಾರಿ ಶಾಲೆಗಳಲ್ಲಿ ಉಳಿಕೆಯಾಗುವ ನಿರ್ವಹಣಾ ಅನುದಾನದಿಂದ ಶಾಲೆಗಳ ಗುಣಮಟ್ಟ ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿಯನ್ನುಹೆಚ್ಚಿಸಬಹುದಾಗಿರುವುದರಿಂದ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಬಾಕಿಯಿರುವ ವಿದ್ಯುತ್ ಮತ್ತು ನೀರಿನ ಬಿಲ್ಲುಗಳನ್ನು ಪಾವತಿ ಮಾಡುವುದರಿಂದ ವಿನಾಯಿತಿ ನೀಡುವಂತೆ ಹಾಗೂ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಮನವಿ ಮಾಡಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.ಮೇಲ್ಕಂಡ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ. ಸರ್ಕಾರ ಆದೇಶಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ/ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಉಚಿತವಾಗಿ ಒದಗಿಸಲಾಗುವ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಬಳಕೆ ಮಾಡುವಂತೆ ಹಾಗೂ ಸಾಧ್ಯವಾದಷ್ಟು ಮಿತವ್ಯಯ ಸಾಧಿಸಲು ಅಗತ್ಯ ಕ್ರಮವಹಿಸತಕ್ಕದ್ದು ಎಂದು ಸರ್ಕಾರದ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!