ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಲಕ್ ಡೌನ್ ವೇಳೆ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿ ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸುತ್ತಿದ್ದಂತೆ , ನಾಳೆಯಿಂದ ರಾಜ್ಯಾದ್ಯಂತ ಎಲ್ಲಾ ಇಂದಿರಾ ಕ್ಯಾಂಟಿನ್ ಗಳಲ್ಲಿ ಉಚಿತ ಆಹಾರ ವ್ಯವಸ್ಥೆಯನ್ನು ಮಾಡುವಂತೆ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿತ್ತು , ಜೊತೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇಲ್ಲ ಎಂಬುದಾಗಿ ತಿಳಿಸಿತ್ತು.ಆದರೆ ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲೂ ನಾಳೆಯಿಂದ ಇಂದಿರಾ ಕ್ಯಾಂಟೀನ್ ನಲ್ಲಿ ಪೊಟ್ಟಣಗಳ ಮೂಲಕ ಉಚಿತವಾಗಿ ಆಹಾರ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ಮೇ. ೧೨ ರಿಂದ ಬಡವರ್ಗದ ಜನರು, ವಲಸಿಗಲು, ಕೂಲಿ ಕಾರ್ಮಿಕರಿಗೆ ದಿನದ ಮೂರೊತ್ತು(ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟ) ಆಹಾರ ಪೊಟ್ಟಣಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ.
ಲಾಕ್ಡೌನ್ ಅವಧಿ ಮುಗಿಯುವವರೆಗೆ ಉಚಿತವಾಗಿ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತದೆ. ಇಂದಿರಾ ಕ್ಯಾಂಟೀನ್ನಲ್ಲಿ ಆಹಾರದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಗುರುತಿನಿ ಚೀಟಿ(ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಡಿಎಲ್, ಕಾರ್ಮಿಕ ಇಲಾಖೆಯ ಗುರುತಿನ ಚೀಟಿ ಸೇರಿದಂತೆ ಇನ್ನಿತ್ಯಾದಿ ಗುರುತಿನ ಚೀಟಿಗಳು) ಸರಬರಾಜುದಾರರಿಗೆ ಒದಗಿಸಬೇಕು.
ಪ್ರತಿಯೊಬ್ಬ ವ್ಯಕ್ತಿ/ಫಲಾನುಭವಿಗಳಿಗೂ ಗರಿಷ್ಠ 3 ಆಹಾರದ ಪೊಟ್ಟಣಗಳನ್ನು ನೀಡಲಾಗುವುದು ಅಥವಾ ಪಡಿತರ ಚೀಟಿಯಲ್ಲಿ ಕುಟುಂಬದ ಒಟ್ಟು ವ್ಯಕ್ತಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರದ ಪ್ಯಾಕೆಟ್ಗಳನ್ನು ನೀಡಲಾಗುವುದು.
ನಗರದ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲಿ ಊಟದ ಪೊಟ್ಟಣಗಳನ್ನು ಪಡೆಯಲು ಬರುವ ಫಲಾನುಭವಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತು ಆಹಾರ ಪೊಟ್ಟಣಗಳನ್ನು ಪಡೆಯಬಹುದು ಎಂಬುದಾಗಿ ತಿಳಿಸಿದೆ.