ಪಳ್ಳಿಯಲ್ಲಿ ಉಚಿತ ಯಕ್ಷಗಾನ ನಾಟ್ಯ ತರಬೇತಿಗೆ ಚಾಲನೆ: ಗೆಜ್ಜೆ ಕಟ್ಟಿ ಹೆಜ್ಜೆ ಹಾಕಲಿದ್ದಾರೆ ಗ್ರಾಮೀಣ ವಿದ್ಯಾರ್ಥಿಗಳು!

ಹೊಸದಿಗಂತ ವರದಿ, ಮಂಗಳೂರು:

ಕರಾವಳಿ ಕರ್ನಾಟಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸಾಂಪ್ರದಾಯಿಕ ಕಲೆ ಯಕ್ಷಗಾನ ಈಗ ಪ್ರತಿ ಹಳ್ಳಿ ಹಳ್ಳಿಯಲ್ಲೂ ಸದ್ದು ಮಾಡುತ್ತಿದೆ. ಯಕ್ಷಗಾನ ನಾಟ್ಯ ತರಬೇತಿ, ಭಾಗವತಿಕೆಗೆ ಎಲ್ಲಿಲ್ಲದ ಬೇಡಿಕೆ ಬರುತ್ತಿದೆ. ವಿವಿಧ ಸಂಘ ಸಂಸ್ಥೆಗಳು ಕೂಡ ಯಕ್ಷಗಾನವನ್ನು ಪೋಷಿಸುತ್ತಾ ಬರುತ್ತಿರುವುದರಿಂದ ಈ ಕಳೆಯ ಮೆರುಗು ಹೆಚ್ಚಾಗುತ್ತಿದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕೂಡ ಈ ನಿಟ್ಟಿನಲ್ಲಿ ದೃಢ ಹೆಜ್ಜೆ ಇಟ್ಟಿದ್ದು, ಗ್ರಾಮೀಣ ಶಾಲೆಗಳಲ್ಲಿ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುತ್ತಿದೆ.

ಬುಧವಾರ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಉಡುಪಿ ಜಿಲ್ಲೆಯ ಕಾರ್ಕಳದ ಪಳ್ಳಿ ನಿಂಜೂರು ಘಟಕದ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣದ ಅಂಗವಾಗಿ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ಉಚಿತ ಯಕ್ಷಗಾನ ನಾಟ್ಯ ತರಬೇತಿ ಕಾರ್ಯಕ್ರಮಕ್ಕೆ ಯಕ್ಷಗಾನ ಪಂಚಮೇಳಗಳ ಯಜಮಾನ ಪಳ್ಳಿ ಕಿಶನ್ ಹೆಗ್ಡೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕರಾವಳಿಯ ಮೇರು ಕಲೆಯಾದ ಯಕ್ಷಗಾನವನ್ನು ಉಳಿಸಿ ಬೆಳೆಸುವ ಪ್ರಯತ್ನವನ್ನು ಪ್ರತಿಯೊಬ್ಬರೂ ಮಾಡಬೇಕು. ಇದರೊಂದಿಗೆ ನಮ್ಮ ಸಂಸ್ಕೃತಿ, ಪರಂಪರೆಗೆ ಯಾವುದೇ ಧಕ್ಕೆಯಾಗದಂತೆ ಎಚ್ಚರವಹಿಸಬೇಕಾದ್ದು ಅತ್ಯವಶ್ಯಕ ಎಂದು ಹೇಳಿದರು.

ಯಕ್ಷಗಾನ ಪರಂಪರೆ ನಿರಂತರ ಮುಂದುವರಿಯಬೇಕು. ವಿದ್ಯಾರ್ಥಿಗಳು ತಮ್ಮ ಕಲಿಕೆಯ ಜೊತೆ ಜೊತೆಗೆ ಯಕ್ಷಗಾನ ಕಲಿಕೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದು ಶ್ಲಾಘನೀಯ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಮಕ್ಕಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಇದರಿಂದ ವ್ಯಕ್ತಿತ್ವ ವಿಕಸನವೂ ಸಾಧ್ಯ. ಶಿಕ್ಷಣದೊಂದಿಗೆ ಮಕ್ಕಳಲ್ಲಿ ಜೀವನ ಮೌಲ್ಯಗಳನ್ನು ಬೆಳೆಸುವ ಕಾರ್ಯವನ್ನು ಹೆತ್ತವರು ಮತ್ತು ಶಿಕ್ಷಕರು ಮಾಡಬೇಕು ಎಂದು ಕಿಶನ್ ಹೆಗ್ಡೆ ಹೇಳಿದರು.

ವೇದಿಕೆಯಲ್ಲಿ ಪಳ್ಳಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಜಗದೀಶ್ ಹೆಗ್ಡೆ ಪೆಜಕೊಡಂಗೆ, ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಅಂಚನ್, ಯಕ್ಷ ಗುರುಗಳಾದ ಮಹಾವೀರ್ ಪಾಂಡಿ, ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಬಂಗೇರ, ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಘಟಕದ ಅಧ್ಯಕ್ಷರು ಸುನಿಲ್ ಬಿ ಶೆಟ್ಟಿ, ಗ್ರಾ.ಪಂ. ಸದಸ್ಯ ಶ್ರೀಕಾಂತ್ ಪ್ರಭು, ಪ್ರಮುಖರಾದ ಮನೋಹರ್ ಶೆಟ್ಟಿ, ವಿಜಯ ಎಂ. ಶೆಟ್ಟಿ, ರಘುನಾಥ್ ಶೆಟ್ಟಿ, ಜಯರಾಮ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಕಾಂತೇಶ್ ಶೆಟ್ಟಿ ಮತ್ತು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ನಾಗರತ್ನ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮೀ ವಂದಿಸಿದರು. ಶಿಕ್ಷಕಿ ಚಿತ್ರ ವಿನಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!