ಪ್ರತಿ ರೈತರಿಂದ 20 ಕ್ವಿಂಟಲ್ ಕೊಬ್ಬರಿ ಖರೀದಿ: ಚಿಕ್ಕಮಗಳೂರು ಡಿಸಿ ರಮೇಶ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರೈತರಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ರೈತರಿಂದ 20 ಕ್ವಿಂಟಲ್ ಕೊಬ್ಬರಿ ಖರೀದಿ ಮಾಡಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಉಂಡೆ ಕೊಬ್ಬರಿ ಖರೀದಿ ಸಂಬಂಧ ನಫೆಡ್ ಹಾಗೂ ಎ.ಪಿ.ಎಂ.ಸಿ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಈ ಸಂಬಂಧ ಜನವರಿ 27 ರಂದು ಸರ್ಕಾರ ಆದೇಶ ಹೊರಡಿಸಿದ್ದು, ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳ ವರೆಗೆ ನಿಗದಿಗೊಳಿಸಲಾಗಿದ್ದು, ನೋಂದಣಿ ಕಾರ್ಯದೊಂದಿಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ಎಕರೆಗೆ 6 ಕ್ವಿಂಟಲ್, ಗರಿಷ್ಠ 20 ಕ್ವಿಂಟಲ್ ಕೊಬ್ಬರಿ ಖರೀದಿ ಪ್ರಮಾಣ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಕಡೂರು ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಖರೀದಿ ಕೇಂದ್ರವನ್ನು ತೆರೆದು ಕೊಬ್ಬರಿ ಖರೀದಿಸಲು ಸೂಕ್ತ ವ್ಯವಸ್ಥೆ ಮಾಡುವಂತೆ ತಿಳಿಸಿದರು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪನಿರ್ದೇಶಕರು, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು , ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!