ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಿ : ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯ

ಹೊಸದಿಗಂತ ವರದಿ ಮಡಿಕೇರಿ:

ಚುನಾವಣೆ ಸಂದರ್ಭ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ನಗರ, ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಪಾವತಿಗೊಳಪಡಿಸಲು ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪ.ಪಂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಈರಪ್ಪ ಶೆಟ್ಟಿ ಅವರು, ಹೊರಗುತ್ತಿಗೆ ನೌಕರರನ್ನು ನೇರ ವೇತನ ಪಾವತಿಗೆ ಒಳಪಡಿಸದ್ದಿದ್ದಲ್ಲಿ ನ.15 ರಂದು ರಾಜ್ಯವ್ಯಾಪಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರು ಒಂದು ದಿನದ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂ ಮಾಡಲು ಮುಂದಾಗಿರುವ ಸರಕಾರ ವಾಹನ ಚಾಲಕರು, ನೀರು ಸರಬರಾಜುದಾರರು, ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಯುಜಿಡಿ ಕಾರ್ಮಿಕರು ಸೇರಿದಂತೆ 15ಸಾವಿರಕ್ಕೂ ಹೆಚ್ಚು ನೌಕರರನ್ನು ಗುತ್ತಿಗೆ ಆಧಾರದಲ್ಲಿ ಉಳಿಸಿಕೊಂಡಿದೆ.

ನಗರಗಳ ಸ್ವಚ್ಛತೆ ಮತ್ತು ಕುಡಿಯುವ ನೀರು ನಿರ್ವಹಣೆಯಲ್ಲಿ ಹೊರಗುತ್ತಿಗೆ ನೌಕರರ ಪಾತ್ರ ಮಹತ್ವದ್ದಾಗಿದೆ. 2017ರಲ್ಲಿ ಪೌರಕಾರ್ಮಿಕರ ನೇಮಕಾತಿ ಸಂದರ್ಭವೂ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸದೆ ಗುತ್ತಿಗೆಯಲ್ಲೇ ಉಳಿಸಿಕೊಳ್ಳಲಾಯಿತು. ಪೌರಾಡಳಿತ ಕಾಯ್ದೆ ಪ್ರಕಾರ ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಲರ್ಸ್, ಯುಜಿಡಿ ಕಾರ್ಮಿಕರನ್ನು ಸಹ ಪೌರ ಕಾರ್ಮಿಕರೆಂದು ಗುರುತಿಸಬೇಕಾಗುತ್ತದೆ. ಆದರೂ ಅಧಿಕಾರಿಗಳು ತಾರತಮ್ಯ ತೋರಿ ನೇರ ನೇಮಕಾತಿ ಮತ್ತು ನೇರ ಪಾವತಿಯಲ್ಲಿ ಹೊರಗುತ್ತಿಗೆ ನೌಕರರಿಗೆ ಅನ್ಯಾಯ ಎಸಗಿದ್ದಾರೆ ಎಂದು ಈರಪ್ಪ ಶೆಟ್ಟಿ ಆರೋಪಿಸಿದ್ದಾರೆ.
ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ತಾರತಮ್ಯ ಕ್ರಮವನ್ನು ಸರ್ಕಾರ ಕೈಬಿಟ್ಟು ಗುತ್ತಿಗೆ ಆಧಾರದ ನೌಕರರನ್ನು ಖಾಯಂಗೊಳಿಸಬೇಕು. ನಮ್ಮ ಮನವಿಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!