‘ಖಾಸಗಿತನ ಮೂಲಭೂತ ಹಕ್ಕು’ ತೀರ್ಪಿನ ಅರ್ಜಿದಾರ ರ ನ್ಯಾ. ಕೆ.ಎಸ್.ಪುಟ್ಟಸ್ವಾಮಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್;

2017ರಲ್ಲಿ ಸುಪ್ರೀಂ ಕೋರ್ಟ್‌ ಖಾಸಗಿತನ ಮೂಲಭೂತ ಹಕ್ಕು ಎಂದು ಐತಿಹಾಸಿಕ ತೀರ್ಪು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ, ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಅವರು ಸೋಮವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು.

2012ರಲ್ಲಿ ಆಧಾರ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊಟ್ಟಮೊದಲ ಬಾರಿಗೆ ರಿಟ್ ಅರ್ಜಿ ಸಲ್ಲಿಸಿದವರು ನ್ಯಾಯಮೂರ್ತಿ ಪುಟ್ಟಸ್ವಾಮಿ.

ಆಧಾರ್ ಯೋಜನೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಪುಟ್ಟಸ್ವಾಮಿ ಅವರು ಮೊದಲು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಂತರ, 26 ಅರ್ಜಿಗಳನ್ನು ಸಲ್ಲಿಸಲಾಯಿತು ಮತ್ತು ಅಂತಿಮವಾಗಿ ಸುಪ್ರೀಂ ಕೋರ್ಟ್ ಖಾಸಗಿತನದ ಹಕ್ಕು ಮೂಲಭೂತ ಹಕ್ಕು ಎಂದು ತೀರ್ಪು ನೀಡಿತ್ತು.

ಫೆಬ್ರವರಿ 8, 1926 ರಂದು ಜನಿಸಿದ ಪುಟ್ಟಸ್ವಾಮಿ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಓದಿದ್ದಾರೆ ಮತ್ತು ಬೆಂಗಳೂರಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು 1952ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡಿದ್ದು, 1977ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು.

1986 ರಲ್ಲಿ ನಿವೃತ್ತರಾದ ನಂತರ, ನ್ಯಾಯಮೂರ್ತಿ ಪುಟ್ಟಸ್ವಾಮಿ ಅವರು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಯ ಬೆಂಗಳೂರು ಪೀಠದ ಉಪಾಧ್ಯಕ್ಷರಾಗಿ, ಆಂಧ್ರಪ್ರದೇಶದ ಆಡಳಿತಾತ್ಮಕ ನ್ಯಾಯಮಂಡಳಿಯ ಅಧ್ಯಕ್ಷರಾಗಿ ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!