ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಗೌರಿ ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಈ ನಡುವೆ ಊರಿಗೆ ಹೋಗುವವರಿಗಾಗಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಮುಂದಾಗಿವೆ.
ಸೆ.5ರಿಂದ ಸೆ.8ರವರೆಗೆ ನಾಲ್ಕು ದಿನಗಳ ಕಾಲ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿ ಹೆಚ್ಚುವರಿ ಬಸ್ ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ವಿವಿಧ ಸ್ಥಳಗಳಿಗೆ ಸಂಚರಿಸಲಿವೆ.
ಗುರುವಾರ, ಶುಕ್ರವಾರದಂದು ಗೌರಿ ಹಬ್ಬ, ಶನಿವಾರದಂದು ಗಣೇಶ ಚತುರ್ಥಿ ಹಬ್ಬ ಹಾಗೂ ಭಾನುವಾರ ವಾರಾಂತ್ಯದ ರಜೆ ಇರುವುದರಿಂದ ಬಸ್ ನಿಲ್ದಾಣಗಳಲ್ಲಿ ಜನಸಂದಣಿಯಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನಿಂದ ಶಿವಮೊಗ್ಗ, ಮೈಸೂರು, ಹೊಸದುರ್ಗ, ತುಮಕೂರು, ಹಾಸನ, ಮಂಡ್ಯ, ಧರ್ಮಸ್ಥಳ, ದಾವಣಗೆರೆ, ಚಳ್ಳಕೆರೆ, ಮಧುಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಊರುಗಳಿಗೆ ಕೆ.ಎಸ್.ಆರ್.ಟಿ.ಸಿಯ ಹೆಚ್ಚುವರಿ ಬಸ್ ಗಳು ಸಂಚಾರ ನಡೆಸಲಿವೆ.