ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಸುಪ್ರೀಂ ಕೋರ್ಟ್ ಕೆ.ಜೆ. ಜಾರ್ಜ್ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ತಿಳಿಸಿದೆ.
ಸಿಬಿಐ ಹಾಗೂ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್‍ನಲ್ಲಿ ಕೆ.ಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ತಿಳಿಸಿದ್ದವು. ಈ ಸಂಬಂಧ ಕೆ.ಜೆ. ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು.
ಗಣಪತಿ ಅವರ ಸಹೋದರಿ ಸಬಿತಾ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದರು. ಇಂದಿನ ವಿಚಾರಣೆ ನಡೆಸಿದ ನ್ಯಾ.ಬೇಲಾ ಎಂ.ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯನ್ನು ತಿರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಏನಿದು ಪ್ರಕರಣ:
ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿಯಾಗಿದ್ದ ಗಣಪತಿ ಮೂಲತಃ ಕೊಡಗಿನವರು. 2016ರ ಜುಲೈ 7ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ 315ನೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗಣಪತಿ ಆತ್ಮಹತ್ಯೆಗೂ ಮುನ್ನ ಕೊಡಗಿನ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, ಅಂದಿನ ಗೃಹ ಸಚಿವ ಜಾರ್ಜ್ ಮತ್ತು ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಹೇಳಿದ್ದರು.