ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಎಲ್ಲಾ ಐದು ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ನಿಲ್ಲಿಸಲು ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಉಚಿತ ಪ್ರಯಾಣ ಯೋಜನೆಯ ಬಗ್ಗೆ ಅನೇಕ ಮಹಿಳೆಯರು ತಮ್ಮೊಂದಿಗೆ ಮಾತನಾಡಿದ್ದಾರೆ ಮತ್ತು ಟಿಕೆಟ್ ಖರೀದಿಸಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಐದು ಗ್ಯಾರಂಟಿಗಳನ್ನು ತೆಗೆದು ಹಾಕಲು ವೇದಿಕೆ ಸಿದ್ಧಪಡಿಸುತ್ತಿದ್ದಾರೆ ಎಂಬ ಸಂದೇಶ ಇದಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ತಮಗೆ ಯಾವುದೇ ಹಣಕಾಸಿನ ಸಮಸ್ಯೆಗಳಿಲ್ಲ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯನ್ನು ನಿಲ್ಲಿಸಬೇಕು ಎಂದು ಯಾರಾದರೂ ಹೇಳಲು ಸಾಧ್ಯವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆಗೆ ಅವರು ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ಪ್ರತಿ ತಾಲ್ಲೂಕಿನಲ್ಲಿ 3,000ದಿಂದ 4,000 ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸುತ್ತಿದ್ದಾರೆ. ರಾಜ್ಯದಲ್ಲಿ 20 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ. ಇದು ಒಂದರ ಹಿಂದೆ ಒಂದರಂತೆ ಖಾತರಿ ಯೋಜನೆಗಳನ್ನು ಹಿಂಪಡೆಯುವ ಸೂಚನೆಯೇ ಹೊರತು ಬೇರೇನೂ ಅಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಶೀಘ್ರದಲ್ಲೇ ಅವರ ನಿಜವಾದ ಬಣ್ಣ ಬಯಲಾಗಲಿದೆ. ಕರ್ನಾಟಕ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯವಾಗಿದೆ. ಆದರೆ ರಾಜ್ಯ ಸರ್ಕಾರದ ಕೆಟ್ಟ ನಿರ್ವಹಣೆಯಿಂದಾಗಿ ಆರ್ಥಿಕತೆ ಕುಸಿದಿದೆ ಎಂದು ಆರೋಪಿಸಿದರು.