ಹೊಸದಿಗಂತ ಡಿಜಿಟಲ್ ಡೆಸ್ಕ್:
“ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಐವರು ಸಮರ್ಥ ಶಾಸಕರಿದ್ದಾರೆ. ಅವರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ, ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿಕೊಡಿ,” ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಮೂಡಿಗೆರೆಯಲ್ಲಿ ಆಯೋಜಿಸಲಾಗಿದ್ದ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಗ್ರಾಮ ಘೋಷಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳ ಬಳಿ ಚರ್ಚಿಸಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಜಾರ್ಜ್ ಅವರ ಈ ಮಾತುಗಳು ಜಿಲ್ಲಾ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿವೆ.
ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು. 24 ಗಂಟೆಯೂ ಜನರ ಜೊತೆಗಿದ್ದು ಕೆಲಸ ಮಾಡುವ ಸ್ಥಳೀಯ ಶಾಸಕರಿಗೆ ಉಸ್ತುವಾರಿ ಪಟ್ಟ ಸಿಗಬೇಕು ಎನ್ನುವುದು ನನ್ನ ಆಶಯ. ನಾನು ಸಚಿವ ಸ್ಥಾನದಲ್ಲಿ ಇರಲಿ ಅಥವಾ ಇಲ್ಲದಿರಲಿ, ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ನನಗೆ ವೈಯಕ್ತಿಕ ಕಾಳಜಿ ಇದೆ. ಸಂಪುಟ ಪುನರ್ ರಚನೆ ಮಾಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಆದರೆ, ಮುಂದಿನ ದಿನಗಳಲ್ಲಿ ಜಿಲ್ಲೆಯ ಶಾಸಕರಿಗೇ ಮಂತ್ರಿಗಿರಿ ನೀಡಬೇಕು ಎಂದು ಒತ್ತಾಯಿಸುತ್ತೇನೆ ಎಂದರು.
ಸಚಿವ ಕೆ.ಜೆ. ಜಾರ್ಜ್ ಅವರ ಈ ಮುಕ್ತವಾದ ಹೇಳಿಕೆಯು ಜಿಲ್ಲೆಯ ಕಾಂಗ್ರೆಸ್ ಶಾಸಕರಲ್ಲಿ ಹೊಸ ಭರವಸೆ ಮೂಡಿಸಿದ್ದು, ಕಾಫಿ ನಾಡಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರಗಳಿಗೆ ನಾಂದಿ ಹಾಡಿದೆ.



