ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ.
ಆಗಸ್ಟ್ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಕರ್ನಾಟಕ ಸರ್ಕಾರ ತೀರ್ಮಾನ ಮಾಡಿದೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಈಗಾಗಲೇ ಎಚ್ಚರಿಕೆ ನೀಡಿದ್ದರು. ಕೆಲ ವರ್ಷಗಳಿಂದಲೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘವು ಆಗ್ರಹಿಸುತ್ತಲೇ ಇತ್ತು.
ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆ ಈಡೇರಿದಂತಾಗಿದೆ. ಇದಲ್ಲದೆ, ರಾಜ್ಯದ ಎನ್.ಪಿ.ಎಸ್. ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್.ಪಿ.ಎಸ್. ನೌಕರರನ್ನು ಓ.ಪಿ.ಎಸ್. ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ. ಈಗಾಗಲೇ ಪಂಜಾಬ್, ರಾಜಸ್ಥಾನ, ಚತ್ತೀಸ್ ಘಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ಮತ್ತೊಂದು ಬೇಡಿಕೆಯಾಗಿದೆ.