ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಕಬ್ಬು ಬೆಳೆಗಾರರ ಹೆಚ್ಚುವರಿ ವಿದ್ಯುತ್ ಬೇಡಿಕೆಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಅಗತ್ಯವಿರುವಷ್ಟು ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದೆ.
ಮಂಡ್ಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಇಂಧನ ಸಚಿವ ಕೆಜೆ.ಜಾರ್ಜ್ ಅವರು, ಬೇಸಿಗೆಯಲ್ಲಿ ಯಾವುದೇ ರೀತಿಯ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ 7 ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ, ಪ್ರಸ್ತಾವನೆ ಆಧರಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.