March 6, 2026
Friday, March 6, 2026
spot_img

ಕಾರವಾರ-ಯಾದಗಿರಿ ಜನತೆಗೆ ಸಿಹಿಸುದ್ದಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಗ್ರೀನ್ ಸಿಗ್ನಲ್

ಹೊಸದಿಗಂತ ಕಾರವಾರ:

ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರವಾರ ಮತ್ತು ಯಾದಗಿರಿ ಜಿಲ್ಲೆಯ ಜನತೆಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಈ ಎರಡೂ ಜಿಲ್ಲೆಗಳಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ, 450 ಹಾಸಿಗೆಗಳ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಲು ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಆ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸತೀಶ್ ಸೈಲ್ ಅವರು ಜಿಲ್ಲೆಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟು, ಬಜೆಟ್‌ನಲ್ಲಿ ಅನುದಾನ ನೀಡುವಂತೆ ಮನವಿ ಮಾಡಿದ್ದರು.

ಶಾಸಕರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಮುಖ್ಯಮಂತ್ರಿಗಳು, ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ಮೂಲಕ ಸಿದ್ದರಾಮಯ್ಯ ಅವರು ಜಿಲ್ಲೆಯ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

ಸಂಕೀರ್ಣ ಕಾಯಿಲೆಗಳಿಗೆ ಹತ್ತಿರದ ದೊಡ್ಡ ನಗರಗಳಿಗೆ ಅಥವಾ ಹೊರ ರಾಜ್ಯಗಳಿಗೆ ಅಲೆಯುವುದು ತಪ್ಪಲಿದೆ. 100 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು ಮತ್ತು ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ.

ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಜಿಲ್ಲೆಯಾದ ಯಾದಗಿರಿಯ ಆರೋಗ್ಯ ಕ್ಷೇತ್ರಕ್ಕೂ ಈ ಘೋಷಣೆಯಿಂದ ಹೊಸ ಚೈತನ್ಯ ಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !