ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮೇ. 10 ರಿಂದ ಮೇ. 24ರವರೆಗೆ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಈ ಸಮಯದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ ನೀಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲಾಕ್ ಡೌನ್ ಸಮಯದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ವಲಸಿಗರಿಗೆ, ದುರ್ಬಲ ವರ್ಗದವರಿಗೆ ಹೊತ್ತಿನ ಊಟಕ್ಕೂ ತೊಂದರೆಯಾಗುವ ಕಾರಣ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಚಿತ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.
ಮೇ. 24 ರವರೆಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ (ಬಿಬಿಎಂಪಿ ಹೊರತುಪಡಿಸಿ) ಇಂದಿರಾ ಕ್ಯಾಂಟೀನ್ ಗಳಲ್ಲಿ ಪ್ರಚಲಿತ ಮಾರ್ಗಸೂಚಿಗಳನ್ವಯ ಉಚಿತವಾಗಿ ಆಹಾರಗಳನ್ನು ಒದಗಿಸಲು ಅಗತ್ಯ ಕ್ರಮವಹಿಸಲು ಸೂಚಿಸಲಾಗಿದೆ.