ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಮುಸ್ಲಿಮರು ಹೆಚ್ಚಿರುವ ಪ್ರದೇಶಕ್ಕೆ ಪಾಕಿಸ್ತಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಸುಪ್ರೀಂ ಕೋರ್ಟ್ ಕೆಂಡಾಮಂಡಲಗೊಂಡಿದ್ದು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ ಆರ್ ಗವಾಯಿ, ಸೂರ್ಯಕಾಂತ್ ಹಾಗೂ ಹೃಷಿಕೇಶ್ ರಾಯ್ ನೇತೃತ್ವದ ಪೀಠ, ಈ ಸಂಬಂಧ ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಂದ ವರದಿ ಕೇಳಿದೆ.
ಇತ್ತೀಚೆಗೆ ಕರ್ನಾಟಕ ಹೈಕೋರ್ಟ್‌ನ ವಿಚಾರಣೆಯ ವೇಳೆ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು, ಕೆಆರ್ ಮಾರುಕಟ್ಟೆಯ ಆಟೋ ಚಾಲಕರ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಬಗ್ಗೆ ಮಾತನಾಡುತ್ತಾ ಗೋರಿಪಾಳ್ಯ ಪ್ರದೇಶವನ್ನು ಪಾಕಿಸ್ತಾನ ಎಂದು ಉಲ್ಲೇಖ ಮಾಡಿದ್ದರು.
ಮೈಸೂರು ರಸ್ತೆಯ ಮೇಲ್ಸೇತುವೆಗೆ ಹೋಗಿ, ಪ್ರತಿ ಆಟೋ ರಿಕ್ಷಾದಲ್ಲಿ 10 ಜನರು ಇರುತ್ತಾರೆ. ಇದು ಅನ್ವಯಿಸುವುದಿಲ್ಲ. ಏಕೆಂದರೆ ಗೋರಿ ಪಾಳ್ಯದಿಂದ ಮಾರುಕಟ್ಟೆಯವರೆಗಿನ ಮೈಸೂರು ರಸ್ತೆಯ ಮೇಲ್ಸೇತುವೆ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಷ್ಟೇ ಕಟ್ಟುನಿಟ್ಟಿನ ಪೊಲೀಸ್ ಅಧಿಕಾರಿಯನ್ನು ಇರಿಸಿದರೂ ಅಷ್ಟೇ ಎಂದು ಹೇಳಿದ್ದರು.
ಮತ್ತೊಂದು ವೀಡಿಯೊದಲ್ಲಿ ಮಹಿಳಾ ವಕೀಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದೂ ಕೂಡ ಕಂಡು ಬಂದಿದೆ.