ಹೊಸದಿಗಂತ ಡಿಜಿಟಲ್ ಡೆಸ್ಕ್:
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಡೆದಿದೆ. ಈ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅಪಘಾತದ ಪರಿಣಾಮವಾಗಿ ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇದನ್ನೂ ಓದಿ:
ಘಟನೆ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದ ಅಪಘಾತ ಸಂಭವಿಸಿರಬಹುದು ಎಂಬ ಪ್ರಾಥಮಿಕ ಅಂದಾಜು ವ್ಯಕ್ತವಾಗಿದೆ. ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.
ಈ ಅಪಘಾತ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಲಾಗಿದೆ.



