ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೃಹತ್ ಭೂ ಹಗರಣದಲ್ಲಿ ರಾಹುಲ್ ಗಾಂಧಿ ಅತ್ಯಾಪ್ತ , ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್. ಆರ್. ರಮೇಶ್ ಅವರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆಯ 150 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ಸ್ವತ್ತನ್ನು ಕಾನೂನುಬಾಹಿರವಾಗಿ ಸ್ವಾಧೀನದಲ್ಲಿರಿಸಿಕೊಂಡಿರುವ ಆರೋಪದಡಿ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸೇರಿದಂತೆ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ.
ಸ್ಯಾಮ್ ಪಿತ್ರೋಡಾ, ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಕೆ. ಸಿಂಗ್ ಮತ್ತು ಸಂಜಯ್ ಮೋಹನ್, ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎನ್.ರವೀಂದ್ರ ಕುಮಾರ್ ಮತ್ತು ಎಸ್.ಎಸ್.ರವಿಶಂಕರ್ ವಿರುದ್ಧ ಬಿಜೆಪಿ ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ದಾಖಲೆಗಳ ಸಹಿತ ದೂರು ದಾಖಲಿಸಿದ್ದಾರೆ.
ಬೆಂಗಳೂರಿನ ಯಲಹಂಕ ಬಳಿಯ ಜಾರಕಬಂಡೆ ಮೀಸಲು ಅರಣ್ಯ ಪ್ರದೇಶದಲ್ಲಿ 12.35 ಎಕರೆ ಜಮೀನನ್ನು ಪಿತ್ರೋಡಾ ಅವರಿಗೆ 2001 ರಲ್ಲಿ ಗುತ್ತಿಗೆ ನೀಡಲಾಗಿತ್ತು. ಔಷಧೀಯ ಗಿಡಮೂಲಿಕೆಗಳನ್ನು ಬೆಳೆಸುವ ಉದ್ದೇಶದಿಂದ ಅಂದಿನ ಸರ್ಕಾರ 10 ವರ್ಷಗಳ ಅವಧಿಗೆ ಈ ಜಮೀನನ್ನು ಗುತ್ತಿಗೆಗೆ ನೀಡಿತ್ತು. 2011 ರಲ್ಲಿ ಗುತ್ತಿಗೆ ಅವಧಿ ಮುಕ್ತಾಯಗೊಂಡರೂ ಪಿತ್ರೋಡಾ ಅವರು ಜಮೀನನ್ನು ತಮ್ಮ ವಶದಲ್ಲೇ ಇಟ್ಟುಕೊಂಡಿದ್ದಾರೆ ಎಂದು ರಮೇಶ್ ಆರೋಪಿಸಿದ್ದಾರೆ.
ಕಳೆದ 15 ವರ್ಷಗಳಿಂದ ಮೀಸಲು ಅರಣ್ಯ ಪ್ರದೇಶವನ್ನು ಅಕ್ರಮವಾಗಿ ಪಿತ್ರೋಡಾ ಅವರು ವಶಪಡಿಸಿಕೊಂಡಿದ್ದಾರೆ ಮತ್ತು ಈ ಜಮೀನಿನ ಪ್ರಸ್ತುತ ಮಾರುಕಟ್ಟೆ ಮೌಲ್ಯ 400 ಕೋಟಿ ರೂಪಾಯಿಗೂ ಹೆಚ್ಚು ಎಂದು ರಮೇಶ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.