Sunday, January 11, 2026

ಶಾಸಕ ಭರತ್ ರೆಡ್ಡಿ ರಕ್ಷಣೆಗೆ ಸರ್ಕಾರ ನಿಂತಿದೆ: ಜೋಶಿ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗಣಿ ನಾಡು ಬಳ್ಳಾರಿಯಲ್ಲಿ ನಡೆದ ಗಲಭೆ ಪ್ರಕರಣ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರಕರಣವನ್ನು ಹಳ್ಳ ಹಿಡಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಟೀಕಿಸಿದ ಜೋಶಿ, “ಸರ್ಕಾರ ಜನಸಾಮಾನ್ಯರ ಹಿತ ಕಾಯುವ ಬದಲು, ಸ್ಥಳೀಯ ಶಾಸಕ ಭರತ್ ರೆಡ್ಡಿ ಅವರನ್ನು ಕಾಪಾಡಲು ಹೆಚ್ಚು ಆಸಕ್ತಿ ತೋರಿಸುತ್ತಿದೆ. ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡುವ ಬದಲು ಸರ್ಕಾರದ ಕೈಗೊಂಬೆಯಾಗಿದ್ದಾರೆ” ಎಂದು ದೂರಿದ್ದಾರೆ.

ಗಲಭೆಯ ತೀವ್ರತೆಯನ್ನು ಗಮನಿಸಿದರೆ ಇದು ಕೇವಲ ಆಕಸ್ಮಿಕ ಘಟನೆಯಲ್ಲ ಎಂಬುದು ಜೋಶಿ ಅವರ ವಾದ. “ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿರುವುದು ಪೊಲೀಸರ ಗುಂಡಿನಿಂದ ಅಲ್ಲ ಎಂಬುದು ಈಗ ಸ್ಪಷ್ಟವಾಗಿದೆ. ಹಾಗಿದ್ದಲ್ಲಿ ಆ ಗುಂಡು ಯಾರದು? ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಕೊಲ್ಲುವ ಉದ್ದೇಶ ಈ ಗಲಭೆಯ ಹಿಂದೆ ಇತ್ತಾ?” ಎಂದು ಅವರು ಪ್ರಶ್ನಿಸುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ರಾಜ್ಯದ ತನಿಖಾ ಸಂಸ್ಥೆಗಳಿಂದ ಸಾಧ್ಯವಿಲ್ಲ. ಆದ್ದರಿಂದ ಪ್ರಕರಣವನ್ನು ತಕ್ಷಣವೇ ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

error: Content is protected !!