ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾನರ್ ಗಲಾಟೆ ಪ್ರಕರಣದಲ್ಲಿ ಮೃತಪಟ್ಟ ರಾಜಶೇಖರ್ ಅವರ ನಿವಾಸಕ್ಕೆ ಇಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಘಟನೆಯಿಂದ ತೀವ್ರ ಆಘಾತಕ್ಕೊಳಗಾಗಿರುವ ಮೃತನ ಕುಟುಂಬಕ್ಕೆ ಸಚಿವರು ವೈಯಕ್ತಿಕವಾಗಿ ಹಾಗೂ ಸರ್ಕಾರದ ವತಿಯಿಂದ ಒಟ್ಟು 25 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ವಿತರಿಸಿದರು. ಚೆಕ್ ಹಸ್ತಾಂತರಿಸಿದ ಬಳಿಕ ಮಾತನಾಡಿದ ಅವರು, “ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ, ಆದರೆ ನಿಮ್ಮ ಬದುಕಿಗೆ ಆಸರೆಯಾಗಿ ಸರ್ಕಾರ ಸದಾ ಇರುತ್ತದೆ” ಎಂದು ಭರವಸೆ ನೀಡಿದರು.
ಕುಟುಂಬದ ಸದಸ್ಯರ ಅಳಲನ್ನು ಆಲಿಸಿದ ಸಚಿವರು, “ಯಾರೂ ಧೈರ್ಯಗೆಡಬೇಡಿ. ನಿಮ್ಮೊಂದಿಗೆ ನಮ್ಮ ಸರ್ಕಾರ ಇರಲಿದೆ. ಸ್ಥಳೀಯ ಶಾಸಕರು ಕೂಡ ನಿಮ್ಮ ಎಲ್ಲಾ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ. ನ್ಯಾಯ ಕೊಡಿಸುವ ನಿಟ್ಟಿನಲ್ಲಿ ನಾವು ಬದ್ಧರಾಗಿದ್ದೇವೆ” ಎಂದು ಧೈರ್ಯ ತುಂಬಿದರು.

