ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ಅವಕಾಶ ವಿಸ್ತರಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ರಾಜ್ಯದ ನಾಗರಿಕ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇ.2ರಷ್ಟು ಮೀಸಲಾತಿ ಕಲ್ಪಿಸುವ ಆದೇಶವನ್ನು ಸರ್ಕಾರ ಸೋಮವಾರ ಹೊರಡಿಸಿದೆ. ಅರಣ್ಯ ಮತ್ತು ಪೊಲೀಸ್ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.3ರಷ್ಟು ಮೀಸಲಾತಿ ನೀಡಲು ಅವಕಾಶ ಕಲ್ಪಿಸಲಾಗಿದೆ.
‘ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2026’ರ ಅಡಿಯಲ್ಲಿ ಈ ಮೀಸಲಾತಿ ಜಾರಿಗೆ ಬರಲಿದೆ. ಕಳೆದ ನಾಲ್ಕು ವರ್ಷಗಳಿಂದ ಕರ್ನಾಟಕ ಒಲಿಂಪಿಕ್ ಸಂಸ್ಥೆ ನಡೆಸಿಕೊಂಡು ಬಂದಿದ್ದ ಪ್ರಯತ್ನದ ಫಲವಾಗಿ ಸರ್ಕಾರದ ಈ ನಿರ್ಧಾರ ಹೊರಬಿದ್ದಿದೆ. ಈ ಹಿಂದೆ ಸಚಿವ ಸಂಪುಟವೂ ಕ್ರೀಡಾ ಸಾಧಕರಿಗೆ ನಾಗರಿಕ ಸೇವಾ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸುವ ತಿದ್ದುಪಡಿ ನಿಯಮಗಳಿಗೆ ಅನುಮೋದನೆ ನೀಡಿತ್ತು.
ನೇರ ನೇಮಕಾತಿಯಲ್ಲಿ ಶೇ.2ರ ಮೀಸಲಾತಿ
ಹೊಸ ನಿಯಮದಂತೆ ರಾಜ್ಯದ ವಿವಿಧ ಸರ್ಕಾರಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಶೇ.2ರ ಮೀಸಲಾತಿ ಅನ್ವಯವಾಗಲಿದೆ. ಸಾಮಾನ್ಯ ವರ್ಗದ ಜೊತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೂ ಸಂಬಂಧಿಸಿದ ನಿಯಮಗಳಂತೆ ಇದರ ಪ್ರಯೋಜನ ದೊರೆಯಲಿದೆ. ಕನಿಷ್ಠ 10 ವರ್ಷ ಕರ್ನಾಟಕದಲ್ಲಿ ವಾಸವಿದ್ದು, ರಾಷ್ಟ್ರೀಯ ಅಥವಾ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಸಾಧನೆಯ ಆಧಾರದ ಮೇಲೆ ಗ್ರೇಸ್ ಮಾರ್ಕ್ಸ್
ಒಲಿಂಪಿಕ್ಸ್, ಏಷ್ಯನ್ ಗೇಮ್ಸ್ ಸೇರಿದಂತೆ ಸರ್ಕಾರ ಅಧಿಸೂಚಿಸಿರುವ 34 ಕ್ರೀಡಾ ವಿಭಾಗಗಳಲ್ಲಿ ಸಾಧನೆ ಮಾಡಿದವರಿಗೆ ಸಾಧನೆಯ ಆಧಾರದ ಮೇಲೆ ಗ್ರೇಸ್ ಮಾರ್ಕ್ಸ್ ನೀಡುವ ವ್ಯವಸ್ಥೆಯೂ ಇರಲಿದೆ. ಕ್ರೀಡಾ ಜೀವನ ಮುಗಿದ ಬಳಿಕವೂ ಸಾಧಕರಿಗೆ ಸ್ಥಿರ ಭವಿಷ್ಯ ರೂಪಿಸಿಕೊಳ್ಳಲು ನೆರವಾಗುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ.
ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಅವರು, ರಾಜ್ಯದ ಕ್ರೀಡಾಪಟುಗಳು ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಕರ್ನಾಟಕದ ಹೆಸರನ್ನು ಎತ್ತಿಹಿಡಿಯುತ್ತಿದ್ದಾರೆ. ಅವರ ಪ್ರತಿಭೆಯನ್ನು ಗುರುತಿಸಿ, ಸಾಧನೆಯನ್ನು ಪ್ರೋತ್ಸಾಹಿಸಿ, ಕ್ರೀಡಾ ಬದುಕಿನ ನಂತರವೂ ಉತ್ತಮ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಈ ಹೆಜ್ಜೆ ಇಟ್ಟಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.



