ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸೋಮವಾರ ರಾಜ್ಯಕ್ಕೆ ವಾಪಸಾಗಲಿದ್ದು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವರ ಮುಂದಿನ ಕ್ರಮದ ಕುರಿತು ತೀವ್ರ ಕುತೂಹಲಗಳು ಮೂಡಿವೆ.
ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಜು.26ರಂದು ಶೋಕಾಸ್ ನೋಟಿಸ್ ನೀಡಿದ ಬಳಿಕ ರಾಜ್ಯಪಾಲರು ದೆಹಲಿ ಪ್ರವಾಸಕ್ಕೆ ತೆರಳಿದ್ದರು. ಇದರ ನಡುವೆ ನೋಟಿಸ್ ವಾಪಸ್ ಪಡೆಯಲು ಸಂಪುಟ ನಿರ್ಣಯ ಕೈಗೊಂಡು ರಾಜ್ಯಪಾಲರಿಗೆ ಕಳುಹಿಸಿದೆ. ಮತ್ತೊಂದೆಡೆ ನೋಟಿಸ್‌ಗೆ ಮುಖ್ಯಮಂತ್ರಿ ಅವರು ಉತ್ತರವನ್ನೂ ಕೊಟ್ಟಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ಆರಂಭಿಸಿರುವುದು ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆದಿವೆ.
ಇದೀಗ ರಾಜ್ಯಪಾಲರು ಸೋಮವಾರ ಮಧ್ಯಾಹ್ನದ ವೇಳೆಗೆ ರಾಜ್ಯಕ್ಕೆ ವಾಪಸ್ಸಾಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸುವ ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.