ದಿಗಂತ ವರದಿ ವಿಜಯಪುರ:
ರಾಜ್ಯ ಕಾಂಗ್ರೆಸ್ ಸರಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜೀವಂತವಾಗಿಡಲು ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟೀಕಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಈಗ ಬಸ್ ದರವನ್ನು ಏರಿಕೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದರು.
ಬೆಲೆ ಏರಿಕೆ ಮಾಡದಿದ್ದರೆ ಸರ್ಕಾರಿ ನೌಕರರ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲದಂತಾಗಿದೆ. ಕಾಂಗ್ರೆಸ್ ಸಚಿವರು, ಶಾಸಕರು ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ ಎನ್ನುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಬೇಡವೆಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡಿದರೆ ಮತ್ತಷ್ಟು ಕಾಂಗ್ರೆಸ್ ಗೆ ಪರಿಣಾಮ ಬೀರಲಿದೆ ಎಂದು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳಿಗಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದರು.
ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ಭಾಗಿಯಾಗಿದೆ ಎಂದು ಆರೋಪಿಸಿದ ಯತ್ನಾಳ, ಎಲ್ಲ ಮಂತ್ರಿಗಳು ಲೂಟಿ ಮಾಡುತ್ತಿದ್ದಾರೆ. ಕಂದಾಯ ಸಚಿವರ ಕ್ಷೇತ್ರದಲ್ಲಿಯೇ ಇಬ್ಬರು ಸಚಿವರು ಜಮೀನು ನುಂಗುವ ಹುನ್ನಾರ ನಡೆಸಿದ್ದಾರೆ ಎಂದು ಹೇಳಿದರು. ಬೆಂಗಳೂರಿನ ಹೃದಯ ಭಾಗದಲ್ಲಿನ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಜಮೀನು ನುಂಗುವ ಹುನ್ನಾರ ನಡೆದಿದೆ. 20 ಎಕರೆ ಜಮೀನನ್ನು ಬೇನಾಮಿಯಾಗಿ ಕಬಳಿಸಲು ನಕಲಿ ಕಾಗದ ಪತ್ರ ಮಾಡಿ ಕಬಳಿಸಲು ಮುಂದಾಗಿದ್ದಾರೆ ಎಂದರು.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಡಿಕೆಶಿ, ಸುರೇಶ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಯತ್ನಾಳ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ಶಾಸಕರಾಗಿದ್ದವರು, ಸಚಿವರಾಗಿದ್ದವರು ಬೇರೆ ಕಡೆ ಸ್ಪರ್ಧಿಸದಂತೆ ಕಾನೂನಿಗೆ ತಿದ್ದುಪಡಿ ತರಬೇಕು ಎಂದರು.