ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಆದೇಶ ಪ್ರಶ್ನಿಸಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ಗುರುವಾರ ನಿಗದಿಪಡಿಸಿತ್ತು. ಈ ನಡುವೆ ಕಳೆದ ಗುರುವಾರ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಡಿ ಕೆ ಶಿವಕುಮಾರ್ ವಿರುದ್ಧ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದಿತ್ತು.
ಇದನ್ನು ಪ್ರಶ್ನಿಸಿ ಮಧ್ಯಂತರ ಅರ್ಜಿ ಸಲ್ಲಿಸಿರುವ ಯತ್ನಾಳ್, ಶಿವಕುಮಾರ್ ವಿರುದ್ಧದ ಪ್ರಕರಣ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಸರ್ಕಾರ ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸುವ ಯತ್ನ ಮಾಡುತ್ತಿದೆ. ಸಿಬಿಐ ಶೇ 90 ರಷ್ಟು ವಿಚಾರಣೆ ಪೂರ್ಣಗೊಳಿಸಿದೆ ಎಂದು ಇದೇ ಪ್ರಕರಣದ ವಿಚಾರಣೆ ನಡೆಸಿದ ಏಕ ಸದಸ್ಯಪೀಠ ತಿಳಿಸಿದೆ. ಈ ಹಂತದಲ್ಲಿ ಸರ್ಕಾರ ಕೈಗೊಂಡಿರುವ ಕ್ರಮ ಸಿಬಿಐ ತನಿಖೆಯನ್ನು ಮೊಟಕುಗೊಳಿಸುತ್ತಿದೆ. ಆ ಮೂಲಕ ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿದೆ. ಆದ್ದರಿಂದ ಸರ್ಕಾರದ ನಿರ್ಧಾರಕ್ಕೆ ಸೀಮಿತವಾಗಿ ತಮ್ಮ ವಾದವನ್ನು ಆಲಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ಈ ಅರ್ಜಿ ಗುರುವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.