ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಅಧಿವೇಶನದಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಸೋಮವಾರ ಅಂಗೀಕರಿಸಲಾಯಿತು.
ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿಧೇಯಕ ಮಂಡನೆಗೆ ವಿರೋಧ ವ್ಯಕ್ತಡಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನ (BBMP) ವಿಭಾಗಿಸಿ ಗ್ರೇಟರ್ ಬೆಂಗಳೂರು ಮಾಡಲು ಹೊರಟಿರುವ ಸರ್ಕಾರ, ಜಟಾಪಟಿ ನಡುವೆ ವಿಧೇಯಕಕ್ಕೆ ಅಂಗೀಕಾರ ಪಡೆದಿದೆ.
ಕಳೆದ ಐದು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆಯೇ ನಡೆದಿಲ್ಲ. ಇದರ ನಡುವೆ ಬೆಂಗಳೂರನ್ನ ಹಲವು ಭಾಗ ಮಾಡಿ ಗ್ರೇಟರ್ ಬೆಂಗಳೂರು ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿತ್ತು. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ಈ ವಿರೋಧದ ನಡುವೆ ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್, ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ನ್ನ ವಿಧಾನಸಭೆಯಲ್ಲಿ ಮಂಡಿಸಿದರು.
ಡಿಕೆ ಶಿವಕುಮಾರ್ ವಿಧೇಯಕ ಮಂಡಿಸುತ್ತಿದ್ದಂತೆ ಸದನದಲ್ಲಿ ಕೋಲಾಹಲ ಎದ್ದಿತ್ತು. ಬಿಜೆಪಿ ಸದಸ್ಯರು ಆಕ್ರೋಶ ಹೊರಹಾಕಿದರು. ಸತೀಶ್ ರೆಡ್ಡಿ, ಮುನಿರತ್ನ, ಮುನಿರಾಜು ಸೇರಿದಂತೆ ಬೆಂಗಳೂರಿನ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ವಿಪಕ್ಷ ನಾಯಕ ಅಶೋಕ್ ಅಂತೂ ಬೆಂಗಳೂರಿನ ಪಾಲಿಗೆ ಮರಣ ಶಾಸನ ಎಂದಿದ್ದಾರೆ.