ಗ್ರಾಮೀಣ ಜನರಿಗಾಗಿ ‘ಗೃಹ ಆರೋಗ್ಯ’ ಕಾರ್ಯಕ್ರಮ: ಸಚಿವ ದಿನೇಶ್ ಗುಂಡೂರಾವ್

ಹೊಸದಿಗಂತ ವರದಿ, ತುಮಕೂರು :

ಆರೋಗ್ಯ ಕರ್ನಾಟಕ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಶುಕ್ರವಾರ ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಆರೋಗ್ಯ ತುಮಕೂರು ಅಭಿಯಾನ ‘ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ನಮ್ಮ ಇಲಾಖೆ ಗೃಹ ಆರೋಗ್ಯ ಎಂಬ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸಿದ್ದು , ತುಮಕೂರು ಜಿಲ್ಲೆಯಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಕ್ಕೆ ಗೃಹ ಸಚಿವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ದಾಸ್ತಾನು ಇಲ್ಲದ ಔಷಧಿಗಳನ್ನು ವೈದ್ಯರು ರೋಗಿಗಳ ಔಷಧಿ ಚೀಟಿಗಳಲ್ಲಿ ಬರೆಯಬಾರದು, ಸರ್ಕಾರಿ ಆಸ್ಪತ್ರೆಗಳಿಗೆ ಬರುವವರು ಬಡವರಾಗಿರುತ್ತಾರೆ, ಅಂತಹವರಿಗೆ ನೆರವಾಗುವುದು ನಮ್ಮ ಕರ್ತವ್ಯ ಎಂದರು.

ಆಸ್ಪತ್ರೆಗಳಲ್ಲಿ ದಾಸ್ತಾನು ಇರಬೇಕಾದ ಔಷಧಿಗಳನ್ನು ಪರಿಶೀಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಹಿಂದಿನ ಕಾಲದಲ್ಲಿ ಸಾಂಕ್ರಾಮಿಕ ರೋಗಗಳಿಂದ ಹೆಚ್ಚಾಗಿ ಮರಣ ಹೊಂದುತ್ತಿದ್ದರು. ಆದರೆ ಇಂದು ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈ ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿ ಇರುವಾಗಲೇ ತೋರಿಸಿಕೊಂಡರೆ, ಗುಣಮುಖರಾಗಬಹುದು ಎಂದು ಸಚಿವರು ಹೇಳಿದರು.

ಈ ಅಭಿಯಾನದಡಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡುವುದರಿಂದ ಗ್ರಾಮೀಣ ಭಾಗದ ಜನರಲ್ಲಿರುವ ಕಾಯಿಲೆಗಳನ್ನು ಪತ್ತೆ ಹಚ್ಚಿ ಸೂಕ್ತವಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಬೇಕು ಎಂದು ಹೇಳಿದರು.

ಈಗಾಗಲೇ ಅನೀಮಿಯಾ ಮುಕ್ತ ಕರ್ನಾಟಕ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಸುಮಾರು 240 ಹೊಸ ಡಯಾಲಿಸಿಸ್ ಯಂತ್ರಗಳನ್ನು ಪ್ರಾರಂಭಿಸಲು ಈಗಾಗಲೇ ಟೆಂಡರ್ ಕರೆಯಲಾಗಿದೆ. 108 ಆಂಬುಲೆನ್ಸ್ ವಾಹನಗಳ ನಿರ್ವಹಣೆ ಮಾಡುವ ಸಲುವಾಗಿ ಮುಂದಿನ ದಿನಗಳಲ್ಲಿ ಕಾಯಕಲ್ಪ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!