ಹೊಸದಿಗಂತ ವರದಿ, ಕಲಬುರಗಿ:
ರಾಜ್ಯ ಸರಕಾರದ ಪಂಚ ಗ್ಯಾರಂಟಿಗಳಲೊಂದಾದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಬಳಸುವ ಗೃಹಜ್ಯೋತಿ ಯೋಜನೆಗೆ ಕಲಬುರಗಿ ಜಿಲ್ಲೆಯಿಂದಲೇ ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದರು.
ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜುಲೈ ತಿಂಗಳಿನಿಂದ ಗೃಹಜ್ಯೋತಿ ಯೋಜನೆಯ ಅರ್ಹರು ಯಾರು ವಿದ್ಯುತ್ ಬಿಲ್ ಕಟ್ಟುವಂತಿಲ್ಲ. ರಾಜ್ಯ ಸರಕಾರವೇ ವಿದ್ಯುತ್ ಭರಿಸಲಿದೆ. ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರು ಆಗಮಿಸಿ ಚಾಲನೆ ನೀಡಲಿದ್ದು, ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.