ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಸ್ವರೂಪ್ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಭೀಕರ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ದಾರುಣ ಘಟನೆಯ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೇಶದಲ್ಲಿ ಹೆಣ್ಣುಮಕ್ಕಳ ರಕ್ಷಣೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ
ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ದೆಹಲಿಯಲ್ಲಿ 17 ವರ್ಷದ ಹೆಣ್ಣುಮಗುವಿನ ಮೇಲಿನ ಕ್ರೂರತೆಯ ಎಲ್ಲಾ ಮಿತಿಗಳನ್ನು ಮೀರಿ, ಅವಳನ್ನು ಹತ್ಯೆ ಮಾಡಲಾಗಿದೆ. ದೇಶದಲ್ಲಿ ಮಹಿಳೆಯರ ಸುರಕ್ಷತೆಯ ಜವಾಬ್ದಾರಿ ಹೊರಲು ಯಾರೂ ಸಿದ್ಧರಿಲ್ಲ, ಕೇವಲ ಮಹಿಳಾ ಅಭಿವೃದ್ಧಿಯ ಬಗ್ಗೆ ಪೊಳ್ಳು ಮಾತುಗಳನ್ನಷ್ಟೇ ಆಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ದೌರ್ಜನ್ಯಕ್ಕೊಳಗಾಗುವ ನೂರಾರು ಮಹಿಳೆಯರಿಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ ಮತ್ತು ಹಲವು ಪ್ರಕರಣಗಳಲ್ಲಿ ಎಫ್‌ಐಆರ್ ಕೂಡ ದಾಖಲಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ನಡೆದಿದ್ದೇನು?
ಸೆ. 13 ರ ಮುಂಜಾನೆ ದೆಹಲಿಯ ಸ್ವರೂಪ್ ನಗರದ ಕುಶಕ್ ರಸ್ತೆಯ ಬಯಲು ಪ್ರದೇಶದಲ್ಲಿ ಬಾಲಕಿಯ ಮೃತದೇಹ ಪತ್ತೆಯಾದಾಗ ಈ ಘಟನೆ ಬೆಳಕಿಗೆ ಬಂದಿತ್ತು. ತನಿಖೆ ಕೈಗೆತ್ತಿಕೊಂಡ ದೆಹಲಿ ಪೊಲೀಸರು 50 ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ವಯಸ್ಕ ಆರೋಪಿಯನ್ನು ಶಿವಂ ಅಲಿಯಾಸ್ ಸುದಾಮ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ರಾಷ್ಟ್ರೀಯ ಮಹಿಳಾ ಆಯೋಗದಿಂದ ಕ್ರಮ
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ವಿಜಯಾ ರಾಹತ್ಕರ್ ಅವರು, ದೆಹಲಿ ಪೊಲೀಸ್ ಕಮಿಷನರ್ ಅವರಿಗೆ ಪತ್ರ ಬರೆದಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ, ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ನೊಂದ ಕುಟುಂಬಕ್ಕೆ ಸುರಕ್ಷತೆ, ಕಾನೂನು ನೆರವು ಹಾಗೂ ಪರಿಹಾರ ಒದಗಿಸುವಂತೆ ಸೂಚಿಸಿ 7 ದಿನಗಳ ಒಳಗಾಗಿ ವರದಿ ಸಲ್ಲಿಸಲು ಆದೇಶಿಸಿದ್ದಾರೆ.



