ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮೀ ಯೋಜನೆಯಡಿ ಬರುವ 2,000 ರೂ ನೆರವು ಮಹಿಳೆಯರ ಕೈಗೆ ಸೇರುವ ಮೊದಲೇ ಸಾಲದ ಕಂತು ಅಥವಾ ಬಡ್ಡಿಗೆ ಜಮೆಯಾಗುತ್ತಿದೆ ಎಂಬ ದೂರುಗಳು ಸರ್ಕಾರದ ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಬಾಕಿ ವಸೂಲಿಗೆ ಬಳಸಬಾರದು ಎಂದು ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
ಸರ್ಕಾರಕ್ಕೆ ಮನವಿ
ಈ ಸಂಬಂಧ ರಾಜ್ಯ ಖಾತರಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದ ಸುಮಾರು 1.24 ಕೋಟಿ ಮಹಿಳಾ ಕುಟುಂಬ ಮುಖ್ಯಸ್ಥರಿಗೆ ಪ್ರತಿ ತಿಂಗಳು 2,000 ರೂ ನೆರವು ನೀಡಲಾಗುತ್ತಿದೆ. ಈ ಮೊತ್ತವು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ ಮತ್ತು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಪ್ರಮುಖವಾಗಿದ್ದು, ಯಾವುದೇ ರೀತಿಯಲ್ಲಿ ಸಾಲದ ಬಾಕಿಗೆ ಹೊಂದಾಣಿಕೆ ಮಾಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು.
ಇದನ್ನೂ ಓದಿ:
ಸಿಎಂ ಡಿಕೆಶಿ ಸೂಚನೆ
ಈ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಡಿಕೆಶಿ ಸೂಚಿಸಿದ್ದು, ಸರ್ಕಾರಿ ಮತ್ತು ಖಾಸಗಿ ಬ್ಯಾಂಕ್‌ಗಳನ್ನು ಒಳಗೊಂಡಂತೆ ರಾಜ್ಯಮಟ್ಟದಲ್ಲಿ ಸ್ಪಷ್ಟ ಮಾರ್ಗಸೂಚಿ ನೀಡುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿಯೂ ಈ ವಿಚಾರದ ಮೇಲೆ ನಿಗಾ ಇರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಮೂಲಕ ಪರಿಶೀಲನೆ ನಡೆಸುವ ಅಗತ್ಯವನ್ನು ಒತ್ತಿಹೇಳಲಾಗಿದೆ.
ಖಾಸಗಿ ಹಣಕಾಸು ಸಂಸ್ಥೆಗಳು ಅಥವಾ ಅವುಗಳ ಏಜೆಂಟ್‌ಗಳು ಬೆದರಿಕೆ ಅಥವಾ ಒತ್ತಡದ ಮೂಲಕ ಗೃಹಲಕ್ಷ್ಮೀ ಹಣವನ್ನು ವಸೂಲಿ ಮಾಡಲು ಮುಂದಾದರೆ ಅಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯೂ ಸರ್ಕಾರದ ಮುಂದಿದೆ. ಈಗಾಗಲೇ ಕಡಿತವಾಗಿರುವ ಹಣವನ್ನು ಫಲಾನುಭವಿಗಳ ಸ್ಪಷ್ಟ ಒಪ್ಪಿಗೆಯಿಲ್ಲದೆ ವಸೂಲಿ ಮಾಡಿದ್ದರೆ, ಅದನ್ನು ಮರುಪಾವತಿಸುವ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.



