May 26, 2026
Tuesday, May 26, 2026
spot_img

ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕದಲ್ಲಿ ಇಂಧನ ದರ ಏರಿಕೆಯು ಈಗ ದೊಡ್ಡ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟಿದೆ. ದೆಹಲಿಗಿಂತಲೂ ಕರ್ನಾಟಕದಲ್ಲಿ ಪೆಟ್ರೋಲ್ ದರ ಹೆಚ್ಚಾಗಲು ರಾಜ್ಯ ಸರ್ಕಾರದ ಅತಿಯಾದ ವ್ಯಾಟ್ ತೆರಿಗೆಯೇ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬದಲು ರಾಜ್ಯ ಸರ್ಕಾರವೇ ತನ್ನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶೋಕ, ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುವರಿ ಆದಾಯವನ್ನು ಗಳಿಸುತ್ತಿದೆ. ವ್ಯಾಟ್ ಕಡಿಮೆ ಮಾಡುವ ಬದಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದೆ. ಈ ಬೆಲೆ ಏರಿಕೆಯಿಂದ ಕೇಂದ್ರ ಸರ್ಕಾರಕ್ಕೆ ಯಾವುದೇ ಆದಾಯ ಬರುವುದಿಲ್ಲ, ಬದಲಿಗೆ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ ಹೆಚ್ಚುವರಿ 6,000 ಕೋಟಿ ರೂ. ಸಿಗುತ್ತಿದೆ. ಇಂಧನ ಬೆಲೆ ಏರಿಕೆಯಿಂದ ಬರುವ ಆದಾಯವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿ
ಸರ್ಕಾರಕ್ಕೆ ನಿಜವಾಗಿಯೂ ಜನರಿಗೆ ಸಹಾಯ ಮಾಡುವ ಆಸೆ ಇದ್ದರೆ, ಅದು ತನ್ನ ಕಡೆಯಿಂದ ತೆರಿಗೆಯನ್ನು ಕಡಿಮೆ ಮಾಡಬೇಕು. ಇಲ್ಲದಿದ್ದರೆ ತನಗೆ ಬರುತ್ತಿರುವ ಹೆಚ್ಚುವರಿ ಆದಾಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಜನರನ್ನು ವಂಚಿಸುವ ತಂತ್ರವಲ್ಲದೆ ಬೇರೇನೂ ಅಲ್ಲ. ಎಂದು ಬಿಜೆಪಿ ನಾಯಕ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ನಲ್ಲಿ ನಾಯಕತ್ವದ ಪೈಪೋಟಿ:
ಕಾಂಗ್ರೆಸ್‌ನಲ್ಲಿನ ನಾಯಕತ್ವದ ಪೈಪೋಟಿಯ ಕುರಿತು ಮಾತನಾಡಿದ ಅಶೋಕ, ಸಿಎಂ ಹುದ್ದೆಗಾಗಿ ಅಧಿಕಾರದ ಹೋರಾಟ ನಡೆಯುತ್ತಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೋ ಅಥವಾ ಬೇರೆ ಪಕ್ಷಕ್ಕೆ ಸೇರಲು ಯೋಜಿಸುತ್ತಿದ್ದಾರೋ ಎಂಬುದು ಸ್ಪಷ್ಟವಾಗಿಲ್ಲ. ಸಿದ್ದರಾಮಯ್ಯ ತಮ್ಮ ಸಚಿವರ ತಂಡದೊಂದಿಗೆ ನವದೆಹಲಿಗೆ ಹೋಗುತ್ತಿದ್ದು, ಅವರು ಸಿಎಂ ಕುರ್ಚಿಯನ್ನು ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದ್ದಾರೆ.

ಪರಮೇಶ್ವರ್ ನೈತಿಕ ಹೊಣೆ ಹೊರಬೇಕು:
ಭಟ್ಕಳದಲ್ಲಿ ಹಿಂದೂಗಳು ನಿರ್ಮಿಸಿದ್ದ ವೇದಿಕೆಯನ್ನು (ಮೂರಿನಕಟ್ಟೆ) ಕೆಲವು ಮುಸ್ಲಿಂ ಮತಾಂಧರು ಧ್ವಂಸಗೊಳಿಸಿದ್ದಾರೆ, ಆದರೆ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಕಲಬುರಗಿ ಜಿಲ್ಲೆಯ ಆಳಂದದಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಭಾಗಿಯಾದವರ ಮೇಲಿನ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದ ನಂತರ ಭಟ್ಕಳದಲ್ಲಿ ಈ ಘಟನೆ ನಡೆದಿದೆ ಮತ್ತು ಇದೆಲ್ಲವೂ ವೋಟ್ ಬ್ಯಾಂಕ್ ರಾಜಕಾರಣದಿಂದ ನಡೆಯುತ್ತಿದೆ. ಪೊಲೀಸರ ಮೇಲೆ ದಾಳಿ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆಯಡಿ ಮೊಕದ್ದಮೆ ದಾಖಲಿಸಬೇಕು ಮತ್ತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಈಗ ಕಾಕ್ರೋಚ್ ಪಕ್ಷವಾಗಿದೆ:
‘ಕಾಕ್ರೋಚ್ ಜನತಾ ಪಾರ್ಟಿ’ ಮೂಲಕ ದೇಶ ವಿರೋಧಿ ಶಕ್ತಿಗಳು ದೇಶವನ್ನು ಒಡೆಯಲು ಯತ್ನಿಸುತ್ತಿವೆ. ಪಾಕಿಸ್ತಾನಿಗಳು ಮತ್ತು ಬಾಂಗ್ಲಾದೇಶಿಯರು ಸಹ ಇದರಲ್ಲಿ ಭಾಗಿಯಾಗಿದ್ದಾರೆ. ಜನರು ಇಂತಹ ಟೂಲ್‌ಕಿಟ್‌ಗಳನ್ನು ನಂಬಬಾರದು. ಕಾಂಗ್ರೆಸ್ ಈಗ ಜಿರಳೆ (ಕಾಕ್ರೋಚ್) ಪಕ್ಷವಾಗಿದೆ. ಈ ಕಾಕ್ರೋಚ್ ಜನತಾ ಪಾರ್ಟಿಯ ಹಿಂದೆ ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜ್ರಿವಾಲ್ ಇದ್ದಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !