ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಪ್ಯಾರಾಟ್ರೂಪರ್ ಪ್ರಾಣ ಕಳೆದುಕೊಂಡಿದ್ದು, ಇನ್ನೂ ಏಳು ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರರು ಈ ಪ್ರದೇಶದಲ್ಲಿ ಅಡಗಿರುವ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.
ಭಾನುವಾರ ಚತ್ರೂ ಬೆಲ್ಟ್‌ನ ಸೊನ್ನಾರ್ ಹಳ್ಳಿಯ ಸಮೀಪದ ಮಂಡ್ರಲ್–ಸಿಂಗ್‌ಪೊರಾ ಪ್ರದೇಶದಲ್ಲಿ ‘ಆಪರೇಷನ್ ತ್ರಾಶಿ–ಐ’ ಆರಂಭಿಸಿದ ಭದ್ರತಾ ಪಡೆಗಳು ಉಗ್ರರನ್ನು ಎದುರಿಸಿದಾಗ, ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ದಾಳಿಯಿಂದಾಗಿ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಇಬ್ಬರು ಅಥವಾ ಮೂವರು ಜೈಶ್ ಉಗ್ರರು ದಟ್ಟ ಕಾಡಿನೊಳಗೆ ತಪ್ಪಿಸಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದ್ದು, ಹೆಚ್ಚುವರಿ ಸೇನಾ ತುಕಡಿಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.


