August 31, 2026
Monday, August 31, 2026
spot_img

ಉಡುಪಿಯಲ್ಲಿ ಭೀಭತ್ಸ ಘಟನೆ: ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಕೊ*ಲೆ

ಹೊಸದಿಗಂತ ವರದಿ ಮಂಗಳೂರು:

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾರೆ.

ಬೈಕ್‌ನಲ್ಲಿ ಬಂದು ಗುಂಡಿನ ದಾಳಿ

ಉಡುಪಿ ಜಿಲ್ಲೆಯ ಪಿಲಾರ್ ಸಮೀಪದ ಮುದರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಸಮೀಪ ಈ ಆಘಾತಕಾರಿ ಘಟನೆ ನಡೆದಿದೆ.

ಪ್ರಾಥಮಿಕ ಮಾಹಿತಿಯಂತೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಡೇವಿಡ್ ಡಿಸೋಜಾ ಅವರ ಮೇಲೆ ಗುಂಡು ಹಾರಿಸಿ ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಡಿಸೋಜಾ ಅವರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ತನಿಖೆ ಆರಂಭಿಸಿದ ಪೊಲೀಸರು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿರ್ವ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಕ್ಷ್ಯ ಸಂಗ್ರಹಕ್ಕಾಗಿ ಅಪರಾಧ ಸ್ಥಳ ಪರಿಶೀಲನಾ ತಂಡ (SOCO) ಹಾಗೂ ಶ್ವಾನದಳವನ್ನು ನಿಯೋಜಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

ಹತ್ಯೆಗೆ ಕಾರಣವೇನು?

ಸದ್ಯ ಹತ್ಯೆಯ ಹಿಂದಿನ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆರೋಪಿಗಳ ಪತ್ತೆ ಹಾಗೂ ಕೃತ್ಯದ ಉದ್ದೇಶವನ್ನು ತಿಳಿಯಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ:

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !