ಹೊಸದಿಗಂತ ವರದಿ ಹಾವೇರಿ:
ಕೇಂದ್ರ ಸರ್ಕಾರದ ಏಕಪಕ್ಷೀಯ ನೀತಿ, ಹಾಗೂ ಇತಿಹಾಸದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಸದರನ್ನು ಅಧಿವೇಶನದ ಸಮಯದಲ್ಲಿ ಅಮಾನತು ಮಾಡಿದ್ದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಕೈ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಕೆಲ ಹೊತ್ತು ರಸ್ತೆ ತಡೆದು ಕೇಂದ್ರ ಸರ್ಕಾರದ ನಡೆ ವಿರುದ್ದ ಮತ್ತು ಬಿಜೆಪಿ ಕ್ರಮಗಳನ್ನು ಖಂಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ದೇಶ ಸ್ವಾತಂತ್ರ್ಯಾ ನಂತರದಲ್ಲಿ ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿಪಕ್ಷ ಸಂಸದರನ್ನು ಹೊರಗಿಡುವ ಮೂಲಕ ತನ್ನ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಮುಂದುವರೆಸಿದೆ. ಇದು ಅತ್ಯಂಕ ಖಂಡನೀಯ ಕ್ರಮವಾಗಿದೆ. ಈ ಮೂಲಕ ಕೇಂದ್ರ ಸರ್ಕರ ತನ್ನ ಹಲವು ಕಾಯ್ದೆಗಳನ್ನು ಏಕಪಕ್ಷಿಯವಾಗಿ ಜಾರಿಗೆ ತರಲು ಮುಂದಾಗಿದ್ದು, ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ತೇಜೋವಧೆಗೆ ಮುಂದಾಗಿದ್ದಾರೆ. ಕೈ ನಾಯಕರು ಸಾಂವಿಧಾನಿಕ ಕ್ರಮಗಳನ್ನು ಅನುಸರಿಸುತ್ತಿದ್ದು ಅದನ್ನು ತಿರುಚಿ ಲಾಭ ಪಡೆದುಕೊಳ್ಳಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಎದುರಾಗುವ ಲೋಕಸಭಾ ಚುನಾವಣೆಯಲ್ಲಿ ಜನರು ಬುದ್ದಿ ಕಲಿಸಲಿದ್ದಾರೆ ಎಂದು ಹೇಳಿದರು.
ಈ ವೇಳೆ ಮುಖಂಡರಾದ ನಗರಸಭೆ ಮಾಜಿ ಅಧ್ಯಕ್ಷ ಸಂಜೀವ ನೀರಲಗಿ, ಪ್ರೇಮಾ ಪಾಟೀಲ, ಶಿವಲೀಲಾ ಶಿರೂರ, ಸಂಜಯಗಾಂಧಿ ಸಂಜೀವಣ್ಣನವರ ಮತ್ತಿತರರು ಇದ್ದರು.