ಹನುಮಾನ್ ಚಾಲೀಸ ವಿವಾದ: ನವನೀತ್ ರಾಣಾ ದಂಪತಿ ಜಾಮೀನು ರದ್ದು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹನುಮಾನ್ ಚಾಲೀಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮರಾವತಿ ಸಂಸದೆ ನವನೀತ್ ರಾಣಾ ಮತ್ತು ಅವರ ಶಾಸಕ ಪತಿ ರವಿ ರಾಣಾ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.
ಮಹಾರಾಷ್ಟ್ರದ ಅಮರಾವತಿಯ ಲೋಕಸಭಾ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ ಅಮರಾವತಿಯ ಬದ್ನೇರಾದ ಶಾಸಕ ರವಿ ರಾಣಾ ಅವರನ್ನು ಮುಂಬೈ ಪೊಲೀಸರು ಏಪ್ರಿಲ್ 23 ರಂದು ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ ಮುಂದೆ ಹನುಮಾನ್ ಚಾಲೀಸ ಪಠಣ ಮಾಡಿದ ಕಾರಣಕ್ಕೆ ಬಂಧಿಸಿದ್ದರು.
ನವನೀತ್ ರಾಣಾ ಮತ್ತು ಅವರ ಪತಿಗೆ ವಿಶೇಷ ನ್ಯಾಯಾಲಯವು ಮೇ ತಿಂಗಳಿನಲ್ಲಿ ಜಾಮೀನು ಮಂಜೂರು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡದಿರುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದ್ದ ವಿಶೇಷ ನ್ಯಾಯಾಲಯ ಮೇ 5ರಂದು ಇಬ್ಬರಿಗೂ ಜಾಮೀನು ಮಂಜೂರು ಮಾಡಿತ್ತು. ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ ಅವರ ಜಾಮೀನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದೂ ನ್ಯಾಯಾಲಯ ಹೇಳಿತ್ತು.
ಕೆಲವು ದಿನಗಳ ನಂತರ ಪೊಲೀಸರು ಪ್ರಕರಣದ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರಿಂದ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ದಂಪತಿಯನ್ನು ಕಸ್ಟಡಿಗೆ ತೆಗೆದುಕೊಳ್ಳುವಂತೆ ಪೊಲೀಸರು ಕೋರಿದ್ದರು.
ದಂಪತಿಗಳು ಪೊಲೀಸರ ಅರ್ಜಿಯನ್ನು ವಿರೋಧಿಸಿದರು. ತಾವು ತನಿಖೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ ಅಥವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಹೇಳಿಕೆಯನ್ನು ನೀಡಿಲ್ಲ ಎಂದು ಹೇಳಿದ್ದರು.
ಜಾಮೀನು ರದ್ದುಗೊಳಿಸುವಂತೆ ಕೋರಿ ಸಹಜವಾದ ಕಾರಣ ನೀಡಲು ಪೊಲೀಸರು ವಿಫಲರಾಗಿದ್ದಾರೆ ಎಂದು ಇಬ್ಬರೂ ನ್ಯಾಯಾಲಯಕ್ಕೆ ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!