ಹೊಸದಿಗಂತ ವರದಿ,ದಾವಣಗೆರೆ :
ವರದಕ್ಷಿಣೆ ತರುವಂತೆ ಪತ್ನಿಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದ ಅಪರಾಧಿ ಪತಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ
ಜಿಲ್ಲೆಯ ಚನ್ನಗಿರಿ ತಾಲೂಕು ಮೇದುಗೊಂಡನಹಳ್ಳಿ ಗ್ರಾಮದ ಮಂಜುನಾಥ(30 ವರ್ಷ) ಶಿಕ್ಷೆಗೆ ಗುರಿಯಾದ ಅಪರಾಧಿ ಪತಿ. ಇವರಿಗೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕು ಮಾರುತಿ ನಗರದ ಶೋಭಾರಾಣಿ ಎಂಬುವರ ಜೊತೆ ವಿವಾಹವಾಗಿತ್ತು. ಮದುವೆ ಸಂದರ್ಭದಲ್ಲಿ 5 ತೊಲ ಬಂಗಾರ, 15 ತೊಲ ಬೆಳ್ಳಿ ಕೊಡುವ ಜೊತೆಗೆ 3 ಲಕ್ಷ ರೂ. ಹಣ ಖರ್ಚು ಮಾಡಿ ಮದುವೆ ಮಾಡಿಕೊಡಲಾಗಿತ್ತು.
ಮದುವೆ ಮಾಡಿಕೊಟ್ಟ ದಿನದಿಂದಲೇ ಗಂಡ ಮತ್ತು ಆತನ ಮನೆಯವರು ಸೇರಿಕೊಂಡು ಹೆಚ್ಚಿನ ವರದಕ್ಷಿಣೆ ತೆಗೆದುಕೊಂಡು ಬರುವಂತೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಶೋಭಾರಾಣಿ 2020 ಡಿಸೆಂಬರ್ 14ರಂದು ಮನೆಯಲ್ಲಿ ನೇಣು ಹಾಕಿಕೊಂಡಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಆಕೆಯನ್ನು ಚಿಕಿತ್ಸೆಗಾಗಿ ಶಿವಮೊಗ್ಗ ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಡಿಸೆಂಬರ್ 15ರಂದು ಶೋಭಾರಾಣಿ ಮೃತಪಟ್ಟಿದ್ದರು. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಯಾದ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮುನ್ನೋಳ್ಳಿ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಂತರ ಆರೋಪ ಸಾಬೀತಾಗಿದ್ದರಿಂದ ಮಂಜುನಾಥನಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40,000 ರೂ. ದಂಡ ವಿಧಿಸಿ ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ತೀರ್ಪು ನೀಡಿದ್ದಾರೆ. ದಂಡದ ಮೊತ್ತದ ಹಣದಲ್ಲಿ 35,000 ರೂ. ಹಣವನ್ನು ಸಂತ್ರಸ್ಥೆ ಕುಟುಂಬದವರಿಗೆ ನೀಡಿ, ಉಳಿದ 5,000 ರೂ. ಹಣವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಿದ್ದಾರೆ. ಪಿರ್‍ಯಾದಿ ಪರವಾಗಿ ಸರ್ಕಾರಿ ವಕೀಲ ಕೆ.ಎಸ್.ಸತೀಶ್ ವಾದ ಮಂಡಿಸಿದ್ದರು. ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಸಹಕರಿಸಿದವರಿಗೆ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿಗಳಾದ ವಿಜಯಕುಮಾರ ಎಂ.ಸಂತೋಷ, ಜಿ.ಮಂಜುನಾಥ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.