ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ನಿಂದಿಸಲಾಗುತ್ತಿದೆ. ಇನ್ನು ಮುಂದೆ ಯಾರಾದರೂ ಈ ರೀತಿ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸರ್ಕಾರದ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಶಿಕ್ಷಣ ಸಚಿವ ಮಧುಬಂಗಾರಪ್ಪ ಉಪಸ್ಥಿತರಿದ್ದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡವನ್ನು ಎಲ್ಲರೂ ಪ್ರೀತಿಸಬೇಕು, ಅಸೂಯೆ ಪಡಬಾರದು. ಪ್ರೀತಿ ಇದ್ದರೆ ಮಾತ್ರ ಕನ್ನಡ ಬೆಳೆಯುತ್ತದೆ. ಕನ್ನಡ ಬಾರದವರೊಂದಿಗೂ ಕನ್ನಡದಲ್ಲಿ ಮಾತನಾಡಿ. ಕನ್ನಡ ಬಾರದವರಿಗೆ ಕನ್ನಡ ಕಲಿಸಬೇಕು, ಆಗ ಕನ್ನಡದ ವಾತಾವರಣ ನಿರ್ಮಾಣವಾಗುತ್ತದೆ. ಈ ಭರವಸೆಯನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಅವಮಾನಿಸುವ ಟ್ರೆಂಡ್ ಹೆಚ್ಚುತ್ತಿದೆ. ಹೀಗಾಗಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರಕಾರ ಹಿಂಜರಿಯುವುದಿಲ್ಲ. ನಾವು ಕನ್ನಡಿಗರು. ನಾವು ಇತರರನ್ನು ಕನ್ನಡಿಗರನ್ನಾಗಿ ಮಾಡುತ್ತೇವೆ. ವ್ಯವಹಾರದಲ್ಲೂ ಕನ್ನಡ ಬಳಸುತ್ತೇವೆ ಎಂದು ಪ್ರತಿಜ್ಞೆ ಮಾಡೋಣ ಎಂದು ಹೇಳಿದ್ದಾರೆ.