Saturday, September 13, 2025

ಹಾಸನ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಾಲೂಕಿನ ಮೊಸಳೆಹೊಸಳ್ಳಿ ಬಳಿ ನಡೆದ ಗಣಪತಿ ಮೆರವಣಿಗೆಯ ವೇಳೆ ಭೀಕರ ಅಪಘಾತ ಸಂಭವಿಸಿ, ವಿದ್ಯಾರ್ಥಿಗಳು ಸೇರಿ ಒಟ್ಟು 9 ಜನರು ಸಾವನ್ನಪ್ಪಿರುವ ಘಟನೆ ಎಲ್ಲರಿಗು ಆಘಾತ ಮೂಡಿಸಿದೆ. ಈ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೇರಿ ಹಲವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

ಪ್ರಧಾನಿ ಮೋದಿ ತಮ್ಮ ಟ್ವೀಟ್‌ನಲ್ಲಿ, “ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಹೃದಯವಿದ್ರಾವಕ. ಮೃತರ ಕುಟುಂಬಗಳ ನೋವಿನಲ್ಲಿ ನಾನು ಭಾಗಿಯಾಗಿದ್ದೇನೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಬರೆದು, ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮೃತರ ಹಾಗೂ ಗಾಯಾಳುಗಳ ಕುಟುಂಬಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಹಾಸನ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಘಟನೆಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಗಾಯಾಳುಗಳ ಚಿಕಿತ್ಸೆಗೆ ತಜ್ಞ ವೈದ್ಯರ ತಂಡವನ್ನು ಕಳುಹಿಸಲಾಗಿದ್ದು, ಅಗತ್ಯ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ.

ರಾತ್ರಿಯೇ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರ ಮಾಡಲಾಗಿದೆ. ಮತ್ತೊಂದೆಡೆ ಅಪಘಾತಕ್ಕೆ ಕಾರಣನಾದ ಕ್ಯಾಂಟರ್ ಚಾಲಕ ಭುವನ್ ವಿರುದ್ಧ ಗೊರೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕನ ಬಗ್ಗೆ ಪೊಲೀಸರು ಗೌಪ್ಯತೆ ಕಾಪಾಡಿದ್ದಾರೆ.

ಇದನ್ನೂ ಓದಿ