ಹೊಸದಿಗಂತ ಡಿಜಿಟಲ್ ಡೆಸ್ಕ್:
ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರುಶನ ಭಾಗ್ಯ ಕಲ್ಪಿಸುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ದೇವಿ ದರ್ಶನದ ಜೊತೆಗೆ ಟೂರ್ ಪ್ಯಾಕೇಜ್, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ಯೋಜನೆ ಹಮ್ಮಿಕೊಳ್ಳಲಾಗಿದೆ.
ಅ.9 ರಂದು ಹಾಸನಾಂಬ ದೇಗುಲದ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಿದ್ದು, ಅ.23ರಂದು ದೇವಾಲಯದ ಬಾಗಿಲು ಮುಚ್ಚಲಿದೆ. ಸಾರ್ವಜನಿಕರ ದರ್ಶನಕ್ಕೂ ಅವಕಾಶ ಮಾಡಿಕೊಡಲಾಗಿದೆ.
ಹಾಸನಾಂಬ ಮತ್ತು ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಈಗಾಗಲೇ ಜಿಲ್ಲಾ ಉಸ್ತುವಾರಿ ಕೃಷ್ಣ ಬೈರೇಗೌಡ ಹಾಗೂ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಪೂರ್ವ ತಯಾರಿಯೊಂದಿಗೆ ಭರದಿಂದ ಸಿದ್ಧತೆ ಸಾಗಿದೆ. ಈಗಾಗಲೇ ಬ್ಯಾರಿಕೇಡ್, ಮ್ಯಾಟ್ ಸೇರಿದಂತೆ ಬರುವ ಭಕ್ತರಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ.