Friday, July 1, 2022

Latest Posts

ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಕನ್ನಡ ದ್ರೋಹಿಗಳನ್ನು ಗಡೀಪಾರು ಮಾಡಿ, ಸಂಘಟನೆಗಳನ್ನು ನಿಷೇಧಿಸಿ: ಎಚ್‌ಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಮಧ್ಯರಾತ್ರಿಯಲ್ಲಿ ಬಂದು ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಮಾಡಿರುವ, ವಾಹನಗಳಿಗೆ ಕಲ್ಲೆಸೆದು ಬೆಂಕಿ ಇಟ್ಟಿರುವ ನಾಡದ್ರೋಹಿಗಳನ್ನು ರಾಜ್ಯದಿಂದ ಗಡೀಪಾರು ಮಾಡಬೇಕು. ಘಟನೆಯಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧ್ಯರಾತ್ರಿ ಬಂದು ರಾಯಣ್ಣ ಪ್ರತಿಮೆಯನ್ನು ಹಾಳು ಮಾಡಿರುವುದು ಹೇಡಿತನ. ಭಾಷಾ ಸಾಮರಸ್ಯ ಹಾಳು ಮಾಡುವ ಇಂಥ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು ಎಂದರು.

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣರ ಪ್ರತಿಮೆಯನ್ನು ವಿರೂಪ ಮಾಡಿರುವುದು ಹೇಯ ಕೃತ್ಯ. ಈ ಮೂಲಕ ಕಿಡಿಗೇಡಿಗಳು ಕನ್ನಡಿಗರಿಗೆ ಮಾತ್ರವಲ್ಲ ಮರಾಠಿಗರಿಗೆ ಕೂಡ ದ್ರೋಹ ಎಸಗಿದ್ದಾರೆ. ಓರ್ವ ರಾಷ್ಟ್ರಪ್ರೇಮಿ, ಮಹಾನ್ ಯೋಧನಿಗೆ ಆಗಿರುವ ಈ ಅಪಚಾರದಿಂದ ಎಲ್ಲರೂ ತಲೆತಗ್ಗಿಸುವಂತಾಗಿದೆ. ಈ ಕೃತ್ಯದಲ್ಲಿ ಯಾವುದೇ ಸಂಘಟನೆಗಳು ಭಾಗಿಯಾಗಿದ್ದರೂ ಅವುಗಳನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಹಾಗೂ ತಪ್ಪಿತಸ್ಥರನ್ನು ರಾಜ್ಯದಿಂದ ಗಡೀಪಾರು ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು. ಈ ಘಟನೆಯ ಹಿಂದೆ ಯಾರಿದ್ದಾರೆಂಬುದನ್ನು ಹೊರಗೆಳೆದು, ಷಡ್ಯಂತ್ರ ನಡೆಸಿದ ಎಲ್ಲರಿಗೂ ತಕ್ಕ ಶಾಸ್ತಿ ಮಾಡಬೇಕೆಂದು ಒತ್ತಾಯಿಸಿದರು.

ಸಿಎಂ ಭಾವನಾತ್ಮಕ ಹೇಳಿಕೆ ತಪ್ಪೇನಿಲ್ಲ
ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರದಲ್ಲಿ ತಮ್ಮ ಅಧಿಕಾರದ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿರುವ ಬಗ್ಗೆ ನಾನು ವ್ಯಾಖ್ಯಾನ ಮಾಡಲು ಹೋಗುವುದಿಲ್ಲ. ಶಿಗ್ಗಾಂವಿಯಲ್ಲಿ ಅವರು ನಾಲ್ಕು ಚುನಾವಣೆಗಳನ್ನು ಸತತವಾಗಿ ಗೆದ್ದಿದ್ದಾರೆ. ಜನ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ಆ ಭಾವನೆಗಳು ಸಹಜ. ಭಾವನಾತ್ಮಕ ವ್ಯಕ್ತಿಗಳಿಗೆ ಮಾತ್ರ ಅದು ಅರ್ಥವಾಗುತ್ತದೆ. ಆ ಸ್ಥಾನಕ್ಕೆ ಅವರು ಬರಬೇಕಾದರೆ ಆ ಕ್ಷೇತ್ರದ ಜನರೇ ಕಾರಣ. ಹೀಗಾಗಿ ಸಿಎಂ ಅವರು ಭಾವನಾತ್ಮಕವಾಗಿ ಮಾತನಾಡಿರಬಹುದು. ಅದರಲ್ಲಿ ತಪ್ಪೇನಿಲ್ಲ ಎಂದು ಎಚ್‌ಡಿಕೆ ಹೇಳಿದರು.

ಅವರ ಮಾತುಗಳು ತಾಯಿ ಹೃದಯ ಇರುವವರಿಗೆ ಮಾತ್ರ ಅರ್ಥವಾಗುತ್ತವೆ. ಬೇರೆಯವರಿಗೆ ಅದು ಅರ್ಥ ಆಗಲ್ಲ. ನನ್ನ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ನಾನು ಅನೇಕ ಸಲ ಹೇಳಿದ್ದೇನೆ, ನನಗೆ ರಾಜಕೀಯ ಜನ್ಮ ಕೊಟ್ಟವರು ರಾಮನಗರದ ಜನ ಅಂತ. ಅವರ ಬಗ್ಗೆ ಹೇಳುವಾಗ ನಾನೂ ಭಾವುಕನಾಗಿದ್ದೇನೆ. ಇದು ಮನುಷ್ಯ ಸಹಜ ಗುಣ ಎಂದ ಕುಮಾರಸ್ವಾಮಿ, ಮುಖ್ಯಮಂತ್ರಿ ಬದಲಾವಣೆ ಆಗುತ್ತೆ ಅಂತ ಬೊಮ್ಮಾಯಿ ಅವರು ಹೀಗೆ ಮಾತನಾಡಿದ್ದಾರೆಂಬುದನ್ನು ನಾನು ಒಪ್ಪಲು ತಯಾರಿಲ್ಲ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss